×
Ad

ಡಿಕೆಶಿ ಆಪ್ತ ಸಚಿನ್ ನಾರಾಯಣ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Update: 2018-07-30 22:20 IST

ಬೆಂಗಳೂರು, ಜು.30: ಅಕ್ರಮ ಹಣ ಸಂಗ್ರಹಣೆ ಹಾಗೂ ವರ್ಗಾವಣೆ ಆರೋಪ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತ ಸಚಿನ್ ನಾರಾಯಣ್ ವಿರುದ್ಧ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಆದಾಯ ತೆರಿಗೆ ಇಲಾಖೆ ಪ್ರಧಾನ ನಿರ್ದೇಶಕರು ನೀಡಿದ್ದ ಪೂರ್ವಾನುಮತಿ ಮತ್ತು ವಿಶೇಷ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಸಚಿನ್ ನಾರಾಯಣ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರರ ವಿರುದ್ಧ ಸಮನ್ಸ್ ಹಾಗೂ ವಿಶೇಷ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತು. ಜತೆಗೆ, ಆದಾಯ ತೆರಿಗೆ ಇಲಾಖೆ ಪ್ರಧಾನ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಸಚಿನ್ ನಾರಾಯಣ್ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದಾಯ ತೆರಿಗೆ ಇಲಾಖೆ ಪ್ರಧಾನ ನಿರ್ದೇಶಕರು ಪೂರ್ವಾನುಮತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 279 ಪ್ರಕಾರ ಪೂರ್ವಾನುಮತಿಯನ್ನು ಆದಾಯ ತೆರಿಗೆ ಇಲಾಖೆ ಆಯುಕ್ತರು, ಪ್ರಧಾನ ಆಯುಕ್ತರು ಅಥವಾ ಮುಖ್ಯ ಪ್ರಧಾನ ಆಯುಕ್ತರು ನೀಡಬೇಕು. ಹೀಗಾಗಿ, ಅರ್ಜಿದಾರರ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಪೂರ್ವಾನುಮತಿ ಮತ್ತು ಅದನ್ನು ಆಧರಿಸಿ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿರುವುದು ಕಾನೂನು ಬಾಹಿರವಾಗಿದ್ದು, ಅದನ್ನು ರದ್ದುಪಡಿಸಬೇಕು ಎಂದು ಕೋರಿದರು. ಈ ವಾದ ಆಲಿಸಿದ ನ್ಯಾಯಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತು.

ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ಸಮನ್ಸ್ ಜಾರಿ ಮಾಡಿದ್ದ ವಿಶೇಷ ನ್ಯಾಯಾಲಯ, ಆಗಸ್ಟ್ 2ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News