ಎತ್ತಿನ ಹೊಳೆ ಯೋಜನೆ: ಸೂಕ್ತ ಪರಿಹಾರ ನೀಡುವವರೆಗೆ ಕಾಮಗಾರಿ ಸ್ಥಗಿತಕ್ಕೆ ಶಾಸಕ ಗೌರಿಶಂಕರ್ ಸೂಚನೆ

Update: 2018-07-31 15:08 GMT

ತುಮಕೂರು,ಜು.31: ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಚನ್ನೇನಹಳ್ಳಿ ಗ್ರಾಮದ ಬಳಿ ಹಾದು ಹೋಗಿರುವ ಎತ್ತಿನಹೊಳೆ ಯೋಜನೆ ಕಾಮಗಾರಿಯ ಸ್ಥಳಕ್ಕೆ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ರೈತರ ಜಮೀನಿಗೆ ಸೂಕ್ತ ಪರಿಹಾರ ವಿತರಿಸದೆ ಕಾಮಗಾರಿಯನ್ನು ನಡೆಸುತ್ತಿರುವ ಸಂಬಂದ ರೈತರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರು ಎತ್ತಿನಹೊಳೆ ಯೋಜನೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈತರಿಗೆ ಪರಿಹಾರ ವಿತರಣೆಯಾಗುವವರೆಗೂ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಕಲೇಶಪುರದಿಂದ ಕೋಲಾರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಚಾಲ್ತಿಯಲ್ಲಿದ್ದು, ಸದರಿ ಯೋಜನೆಯ ಮಾರ್ಗವು ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದುಹೊಗುತ್ತಿರುವ ಕಾರಣ ಗ್ರಾಮಾಂತರ ಭಾಗದ ಕೆರೆಗಳಿಗೂ ಸಹ ನೀರು ಹರಿಸುವಂತೆ ಸರಕಾರಕ್ಕೆ ಒತ್ತಡ ಹೇರುವುದಾಗಿ ತಿಳಿಸಿದರು.

ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಧಿಕಾರಿಗಳು ರೈತರಿಗೆ ಯಾವುದೇ ನೋಟಿಸ್ ನೀಡದೆ ಭೂ ಸ್ವಾದೀನ ಪಡಿಸಿಕೊಂಡು ಕಾಮಗಾರಿ ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳಿಯ ರೈತರು ಶಾಸಕರಿಗೆ ದೂರು ನೀಡಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು. ರೈತರ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿದ ಶಾಸಕರು ರೈತರೊಂದಿಗೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಭೂಸ್ವಾದೀನ ಪಡಿಸಿಕೊಂಡು ಪರಿಹಾರ ನೀಡದಿರುವ ರೈತರ ಭೂ ದಾಖಲೆಗಳೊಂದಿಗೆ ಭೇಟಿಯಾಗುವಂತೆ ಸೂಚಿಸಿದ ಅವರು, ಅಲ್ಲಿಯವರೆಗೆ ರೈತರ ಜಮೀನಿನಲ್ಲಿ ಕಾಮಗಾರಿ ನಡೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಹಾಲನೂರು ಅನಂತ್ ಕುಮಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್, ಜೆಡಿಎಸ್ ಮುಖಂಡರಾದ ವಿ.ಎನ್.ಮೂರ್ತಿ, ಕೆಂಪನರಸಯ್ಯ, ಭೈರೇಗೌಡ ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು, ಸ್ಥಳಿಯರು, ರೈತರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News