ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2018-08-01 06:46 GMT

ಮಂಗಳೂರು, ಆ.1: ನಗರದ ಪಂಪ್‌ವೆಲ್‌ನ ಮೇಲ್ಸೇತುವೆ ಕಾಮಗಾರಿಯ ವಿಳಂಬ ಖಂಡಿಸಿ ಮಂಗಳೂರು ನಗರ ಮತ್ತು ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ಪಂಪ್‌ವೆಲ್‌ನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮತ್ತು ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿದರು.

ದೇಶದ ವಿವಿಧ ಕಡೆಗಳಲ್ಲಿ ಪ್ಲೈಓವರ್ ಕಾಮಗಾರಿಗಳು ಒಂದು-ಒಂದೂವರೆ ವರ್ಷದೊಳಗೆ ಮುಕ್ತಾಯವಾಗುತ್ತದೆ. ಆದರೆ ಪಂಪ್‌ವೆಲ್‌ನ ಈ ಕಾಮಗಾರಿಯನ್ನು ಆರಂಭಿಸಿ ಎಂಟು ವರ್ಷವಾದರೂ ಮುಕ್ತಾಯವಾಗಿಲ್ಲ. ಕೇಂದ್ರ ಸರಕಾರವನ್ನು ಪ್ರತಿನಿಧಿಸುತ್ತಿರುವ ಈ ಕ್ಷೇತ್ರದ ಸಂಸದರು ಇದಕ್ಕೆ ನೇರ ಹೊಣೆಗಾರರಾಗಿದ್ದಾರೆ. ಆದರೆ ಅವರು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಸಂದರ್ಭ ಪ್ರತಿಭಟನಾಕಾರರು ಸಂಸದ ನಳಿನ್ ಕುಮಾರ್ ಕಟೀಲು ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮಾಜಿ ಮೇಯರ್ ಮಹಾಬಲ ಮಾರ್ಲ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಮಹಿಳಾ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಮತ್ತಿತರರು ಪಾಲ್ಗೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News