ಸಹಕಾರಿ ಸಕ್ಕರೆ ಕಾರ್ಖಾನೆಗಳ ಪುನಃಶ್ಚೇತನ ವರದಿ ಸಲ್ಲಿಕೆಗೆ ಸಿಎಂ ಸೂಚನೆ
ಬೆಂಗಳೂರು, ಆ.1: ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಪುನಃಶ್ಚೇತನಗೊಳಿಸುವ ಬಗ್ಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಮೈಸೂರು ಜಿಲ್ಲೆಯ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಸಕ್ಕರೆ ಕಾರ್ಖಾನೆಗಳನ್ನು ಪುನಃಶ್ಚೇತನಗೊಳಿಸುವುದರಿಂದ ರೈತರಿಗೆ ಯಾವ ರೀತಿ ನೆರವಾಗಲಿದೆ. ನಷ್ಟದ ಪ್ರಮಾಣ ತಗ್ಗಿಸುವುದು ಹೇಗೆ ಎಂಬುದು ಸೇರಿದಂತೆ ಪುನಃಶ್ಚೇತನದ ಸಾಧಕ-ಬಾಧಕಗಳ ಬಗ್ಗೆ ವರದಿ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.
ಸಕ್ಕರೆ ಕಾರ್ಖಾನೆಗಳಿಗೆ ಹಣ ನೀಡುವುದರಿಂದ ಪುನಃಶ್ಚೇತನಗೊಳಿಸಲಾಗದು. ಅವುಗಳು ಎದುರಿಸುತ್ತಿರುವ ಸಮಸ್ಯೆ ಸ್ಥಿತಿಗತಿ ಬಗ್ಗೆ ವರದಿ ನೀಡಿದರೆ, ಅಗತ್ಯ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದು ಅಧಿಕಾರಿಗಳಿಗೆ ಅವರು ಹೇಳಿದರು.
ಸಭೆಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ , ಶಾಸಕ ಎಚ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.