ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶ

Update: 2018-08-01 15:15 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.1: 2019ನೆ ಸಾಲಿನ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವ 18-19 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು ಇದನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಗೆ ಹೆಚ್ಚಿನ ಪ್ರಮಾಣದಲ್ಲಿ ಹೆಸರನ್ನು ಸೇರ್ಪಡೆಗೊಳಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ಜಿಲ್ಲಾಧಿಕಾರಿ ಬಿ.ಎಂ.ಶಂಕರ್, ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಮತಗಟ್ಟೆ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆದು ಹೆಚ್ಚಿನ ಪ್ರಮಾಣದ ಮತದಾರರು, ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಎಲ್ಲಾ ವಾರ್ಡ್ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ 10 ಜನ ಬಿ.ಎಲ್.ಓ.ಗಳಿಗೆ ಒಬ್ಬರಂತೆ ಸೂಪರ್‌ವೈಸರ್ ನಿಯೋಜಿಸುವುದು ಹಾಗೂ ಈಗಾಗಲೇ ಕಡಿಮೆ ಮತದಾರರು ನೋಂದಣಿಯಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಮಾಣದ ಮತದಾರರನ್ನು ಸೇರ್ಪಡೆಗೊಳಿಸಲು ಸೂಕ್ತಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ತಮ್ಮ ವಾಸದ ವ್ಯಾಪ್ತಿಗೆ ಒಳಪಡುವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ತಂದೆ/ಗಂಡನ ಹೆಸರು, ಮನೆ ವಿಳಾಸ, ಲಿಂಗ, ವಯಸ್ಸು, ಮುಂತಾದ ವಿವರಗಳನ್ನು ಪರಿಶೀಲಿಸಿಕೊಳ್ಳುವುದು.

ಒಂದು ವೇಳೆ ಹೆಸರು ಬಿಟ್ಟು ಹೋಗಿದ್ದಲ್ಲಿ ಆ.10ರವರೆಗೆ ಬಿ.ಎಲ್.ಓ ರವರು ಮನೆ ಮನೆಗೆ ಭೀಟಿ ನೀಡುವ ಸಂದರ್ಭದಲ್ಲಿ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ದಿನಾಂಕ: ಅಕ್ಟೋಬರ್ 10 ರಿಂದ ನವೆಂಬರ್ 20ರ ಅವಧಿಯಲ್ಲಿ ನಮೂನೆ - 6 ಅನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಅದೇ ರೀತಿ ಹತ್ತಿರದ ತಾಲೂಕು ಕಚೇರಿ, ವಾರ್ಡ್ ಕಚೇರಿ, ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ನಮೂನೆ-6 ಸಲ್ಲಿಸುವುದು. ಆ.17ರಂದು 7 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಇಆರ್‌ಒ/ಎಇಆರ್‌ಒ ರವರ ಕಚೇರಿಯಲ್ಲಿ ಬಿ.ಎಲ್.ಓ. ಹಾಗೂ ಚುನಾವಣಾ ಸಿಬ್ಬಂದಿಗಳ ಸಭೆ ಕರೆದು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸುವ ಕಾರ್ಯದಲ್ಲಿ ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News