×
Ad

ಸ್ಕೌಟ್ಸ್ ಮತ್ತು ಗೈಡ್ಸ್ ಸಮನ್ವಯದ ಬದುಕನ್ನು ಪ್ರೇರೆಪಿಸುತ್ತದೆ: ಪಿ.ಜಿ.ಆರ್.ಸಿಂಧ್ಯಾ

Update: 2018-08-01 22:41 IST

ತುಮಕೂರು,ಆ.01: ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹ ಕಲಿಯುವುದರ ಜೊತೆಗೆ ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳುವುದನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಪ್ರೇರಿಪಿಸುತ್ತದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ತಿಳಿಸಿದ್ದಾರೆ.

ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದಿಂದ ಬುಧವಾರ ನಡೆದ 2018-19ನೇ ಸಾಲಿನ ಕಾರ್ಯ ಯೋಜನೆಗಳ ಕುರಿತ ಸಮನ್ವಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಗೆ ಸೇರಲು ಮುಂದಾಗಬೇಕು ಎಂದರು.

ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಸ್ತು ಮತ್ತು ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸ ಹೆಚ್ಚಾಗಬೇಕು. ಪರಿಸರ ಜಾಗೃತಿ, ಸ್ವಚ್ಚತೆ ಅತ್ಯಂತ ಮಹತ್ವದ್ದು, ಪರಿಸರ ಉಳಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನೂ ಮಕ್ಕಳಲ್ಲಿ ಮೂಡಿಸಬೇಕು. ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದಾಗಬೇಕು. ಮನುಷ್ಯನಿಗೆ ಸಂತೋಷ ಮತ್ತು ಆನಂದ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಸಿಗಲು ಸಾಧ್ಯ ಎಂದು ಪಿ.ಜಿ.ಆರ್.ಸಿಂಧ್ಯ ತಿಳಿಸಿದರು.

ಚಿ.ನಾ. ಹಳ್ಳಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯದರ್ಶಿ ಬಸವರಾಜಯ್ಯ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಬಗ್ಗೆ ಶಿಕ್ಷಕರು ಒಲವು ತೋರುತ್ತಿಲ್ಲ. ಹೀಗಾಗಿ ಮಕ್ಕಳನ್ನು ಸ್ಕೌಟ್ಸ್ ಮತ್ತು  ಗೈಡ್ಸ್ ಗೆ ಸೇರ್ಪಡೆ ಮಾಡಿಸಿಕೊಳ್ಳಲು ಸಮಸ್ಯೆಯಾಗುತ್ತಿದೆ. ಹಾಗಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಚಾರ ಮಾಡಿ, ಶಿಕ್ಷಕರಲ್ಲಿ ಆಸಕ್ತಿ ಮೂಡುವಂತೆ ಮಾಡಬೇಕು. ಅಲ್ಲದೆ ಯಾವ ಶಾಲೆಯಿಂದ ಶಿಕ್ಷಕರು ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಗೆ ಬಂದಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾ ಕೇಂದ್ರದಿಂದ ಲಭ್ಯವಾಗುವಂತೆ ಮಾಡಬೇಕು. ಇದರಿಂದ ಶಿಕ್ಷಕರನ್ನು ಸಂಪರ್ಕಿಸಲು ಸುಲಭವಾಗುತ್ತದೆ. ಇನ್ನೂ ಹಲವು ಕಾರ್ಯದರ್ಶಿಗಳು ಸಭೆಯಲ್ಲಿ ಕಚೇರಿ ಸಮಸ್ಯೆ, ಮಾಹಿತಿ ಸಮರ್ಪಕವಾಗಿ ಲಭ್ಯವಾಗುವಂತೆ ಮಾಡಬೇಕು. ಹೀಗೆ ನಾನಾ ಸಮಸ್ಯೆಗಳಿಗಳನ್ನು ಬಗೆಹರಿಸುವಂತೆ ತಿಳಿಸಿದರು.

ಈ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಷಾ ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯದರ್ಶಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News