ಬೆಂಗಳೂರು: ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕರವೇ ಧರಣಿ
ಬೆಂಗಳೂರು, ಆ.2: ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಡಾ. ಬಿ.ಎಸ್.ನಂಜುಂಡಪ್ಪ ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುರುವಾರ ನಗರದ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ವೇದಿಕೆ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ನಾಡಿನ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಡಾ.ಬಿ.ಎಸ್.ನಂಜುಂಡಪ್ಪ ಪ್ರಾದೇಶಿಕ ಅಸಮತೋಲನ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನಾರಾಯಣ ಗೌಡ, ಪ್ರತ್ಯೇಕವಾದದ ಕೂಗು ಯಾವುದೇ ಕಾರಣಕ್ಕೂ ಹುಟ್ಟಿಕೊಳ್ಳಬಾರದು, ಕರ್ನಾಟಕ ಅಖಂಡ ರಾಜ್ಯವಾಗಿ ಉಳಿಯಬೇಕು. ಹಳೇ ಮೈಸೂರು, ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಎಂದು ತಾರತಮ್ಯ ಮಾಡದೆ ಸಮಗ್ರ ರಾಜ್ಯದ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.
ಹಿಂದುಳಿದ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳು ಯೋಜನೆಗಳನ್ನು ರೂಪಿಸುವಾಗ ರಾಜ್ಯದ ಎಲ್ಲ ಭಾಗಗಳನ್ನು ಗಮನದಲ್ಲಿಟ್ಟುಕೊಳ್ಳುವ ಜೊತೆಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಬಾರದು ಎಂದು ಒತ್ತಾಯಿಸಿದರು.