×
Ad

ವಿದ್ಯುತ್ ಪೂರೈಕೆಗೆ ಮೂಲಸೌಕರ್ಯ ಸುಧಾರಣೆ: ಮುಖ್ಯಮಂತ್ರಿ

Update: 2018-08-02 20:34 IST

ಬೆಂಗಳೂರು, ಆ.2: ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆ ಕುರಿತು ಮೂಲ ಸೌಕರ್ಯಗಳನ್ನು ಸುಧಾರಿಸಲು ಉನ್ನತ ಮಟ್ಟದ ಸಭೆ ಕರೆಯಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆಗೆ ತೊಂದರೆ ಆಗಬಾರದು. ಅಲ್ಲದೆ, ವಿದ್ಯುತ್ ಸೋರಿಕೆ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದರು.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಲೈನ್‌ಗಳನ್ನು ಹಾಕಬೇಕು. ಮರಗಳನ್ನು ಕಡಿಯುವುದನ್ನು ನಿಯಂತ್ರಿಸಿ. ಬೆಂಗಳೂರು ನಗರದಲ್ಲಿ 3 ಸಾವಿರ ಮೆಗಾ ವ್ಯಾಟ್ ದಾಖಲಾದ ವಿದ್ಯುತ್ ಬೇಡಿಕೆ ಇದೆ. ನಗರದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಈ ಸಂಬಂಧ ಇರುವ ತೊಡಕುಗಳನ್ನು ಪರಿಹರಿಸಲು, ಲೋಕೋಪಯೋಗಿ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಹಾಗೂ ಪೊಲೀಸ್ ಆಯುಕ್ತರನ್ನು ಒಳಗೊಂಡ ಸಭೆ ಕರೆಯಲು ಮುಖ್ಯಮಂತ್ರಿ ಸೂಚಿಸಿದರು. ಸಭೆಯಲ್ಲಿ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ ಮತ್ತಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News