ಕೆಪಿಸಿಸಿ ಸಭೆಯಲ್ಲಿ ದ.ಕ, ಉಡುಪಿ ಜಿಲ್ಲೆ ಲೋಕಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ

Update: 2018-08-03 16:42 GMT

ಬೆಂಗಳೂರು, ಆ.3: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಚರ್ಚೆ ನಡೆಯಿತು.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎರಡು ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಗಾಗಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು.

ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾರುಪತ್ಯ ಮೆರೆದಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಈ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ಕೈ ವಶ ಮಾಡಿಕೊಳ್ಳಲು ಸಿದ್ಧತೆಗಳನ್ನು ಆರಂಭಿಸಿದೆ.

ಲೋಕಸಭಾ ಚುನಾವಣೆಗೆ ಸಿದ್ಧರಾಗಿ, ಪಕ್ಷ ಮತ್ತು ಕಾರ್ಯಕರ್ತರನ್ನು ಸಿದ್ಧಗೊಳಿಸಿ, ಬಿಜೆಪಿಯವರು ಜನರ ಮುಂದಿಡುವ ಕಪಟ ಹಿಂದುತ್ವ ಕಾರ್ಯಸೂಚಿಗಳ ಕುರಿತು ಮನವರಿಕೆ ಮಾಡಿಕೊಡಿ ಎಂದು ಜಿಲ್ಲಾ ಮಟ್ಟದ ನಾಯಕರಿಗೆ ಪಕ್ಷ ಸೂಚನೆ ನೀಡಿದೆ. ಹಾಲಿ ಮತ್ತು ಮಾಜಿ ಶಾಸಕರು ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ, ಸಮಾವೇಶಗಳನ್ನು ನಡೆಸಿ ಜನರ ವಿಶ್ವಾಸಗಳಿಸಲು ಪ್ರಯತ್ನಿಸಿ ಎಂದು ಮುಖಂಡರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡದೆ ಇರುವ ಪದಾಧಿಕಾರಿಗಳು, ಮುಖಂಡರ ಬಗ್ಗೆ ಮಾಹಿತಿ ಒದಗಿಸಿ, ಅವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ. ಬ್ಲಾಕ್‌ಮಟ್ಟದ ಸಮಿತಿಗಳನ್ನು ಆದಷ್ಟು ಶೀಘ್ರದಲ್ಲಿ ಪುನರ್ರಚನೆ ಮಾಡಲಾಗುವುದು. ಇದರಿಂದ, ಪಕ್ಷದಲ್ಲಿ ಹೊಸ ಸಂಚಲನ ಮೂಡಲಿದೆ. ತಳಮಟ್ಟದಲ್ಲಿ ಪಕ್ಷ ಸಂಘಟನೆಗಾಗಿ ನಿಮಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದರೆ, ಪಕ್ಷ ಹಾಗೂ ರಾಜ್ಯಮಟ್ಟದ ನಾಯಕರ ಮೇಲೆ ಹೆಚ್ಚಿನ ಒತ್ತಡ ಇರುವುದಿಲ್ಲ. ಆದುದರಿಂದ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅದರಂತೆ, ಮುಂದುವರೆಯಿರಿ ಎಂದು ಜಿಲ್ಲಾ ನಾಯಕರಿಗೆ ಸೂಚನೆಗಳನ್ನು ನೀಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಜಿ ಸಚಿವ ವಿನಯ್‌ ಕುಮಾರ್ ಸೊರಕೆಯನ್ನು ಕಣಕ್ಕಿಳಿಸುವುದು ಉತ್ತಮ ಎಂದು ಹಲವಾರು ಮುಖಂಡರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ, ಕೆಲವರು ಮಾಜಿ ಸಿಎಂ ವೀರಪ್ಪಮೊಯ್ಲಿ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಹೆಸರುಗಳು ಸಭೆಯಲ್ಲಿ ಪ್ರಸ್ತಾಪವಾಗಿವೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ರಮಾನಾಥ್ ರೈ, ಈಗಲೂ ಜಿಲ್ಲೆಯ ಮಟ್ಟಿಗೆ ಅತ್ಯಂತ ಪ್ರಭಾವಶಾಲಿಯಾಗಿರುವುದರಿಂದ, ಈ ಬಾರಿ ಜನಾರ್ದನ ಪೂಜಾರಿ ಬದಲು ರಮಾನಾಥ್ ರೈರನ್ನು ಕಣಕ್ಕಿಳಿಸುವುದು ಉತ್ತಮ ಎಂದು ಮುಖಂಡರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಮಾನಾಥ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಸಂಘಟನೆ ನಡೆಯುತ್ತಿದ್ದು, ಅವರ ನೇತೃತ್ವದಲ್ಲಿಯೆ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ನಮಗೆ ಮುಖ್ಯ. ಅದಕ್ಕಾಗಿ, ಈಗಿನಿಂದಲೆ ಸಿದ್ಧತೆಗಳನ್ನು ಆರಂಭಿಸಿದ್ದೇವೆ. ಕೇಂದ್ರ ಸರಕಾರದ ಲೋಪದೋಷಗಳನ್ನು, ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಪಕ್ಷವನ್ನು ಬ್ಲಾಕ್ ಮತ್ತು ಬೂತ್‌ಮಟ್ಟದಿಂದ ಸಂಘಟಿಸುತ್ತೇವೆ. ನಮ್ಮಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಂಡು, ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಪೈಪೋಟಿ ಇರುವ ಜಿಲ್ಲೆ ನಮ್ಮದು. ಪಕ್ಷ ಅವಕಾಶ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನ್ನ ಬದಲು ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಪರವಾಗಿ ಕೆಲಸ ಮಾಡುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆ ಮಾಡಲು ಶ್ರಮಿಸುತ್ತೇನೆ.
-ಬಿ.ರಮಾನಾಥ ರೈ, ಮಾಜಿ ಸಚಿವ

ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ?
ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಅನ್ಯ ಪಕ್ಷಗಳಿಗೆ ಸೇರಿರುವ ಮುಖಂಡರನ್ನು ಪುನಃ ಮಾತೃಪಕ್ಷಕ್ಕೆ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮುಖಂಡರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಲಾಭವಾಗುವ ನಾಯಕರನ್ನು ಕರೆ ತರಲು ಪ್ರಯತ್ನಿಸಿ. ಪ್ರಮುಖವಾಗಿ ಚಿಕ್ಕಮಗಳೂರು ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಮುದ್ದುಕೃಷ್ಣ, ಮಾಜಿ ಶಾಸಕರಾದ ಶಿವಶಂಕರಪ್ಪ, ಶ್ರೀನಿವಾಸ್‌ರನ್ನು ಕರೆ ತರುವಂತೆ ಸಭೆಯಲ್ಲಿ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News