ಪೋಕ್ಸೋ ಕಾಯ್ದೆ: ಪ್ರಕರಣಗಳನ್ನು ಶೀಘ್ರ ನ್ಯಾಯಾಲಯಕ್ಕೆ ಹಾಜರುಪಡಿಸಲು ನೀಲಮಣಿ ಎನ್.ರಾಜು ಸೂಚನೆ

Update: 2018-08-04 12:35 GMT

ಬೆಂಗಳೂರು, ಆ.4: ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಸೂಕ್ಷ್ಮವಾಗಿ ತನಿಖೆಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಎಂದು ಸೂಚನೆ ನೀಡಿದ್ದಾರೆ.

ಶನಿವಾರ ನಗರದ ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕರ ಪ್ರಧಾನ ಕಚೇರಿಯಲ್ಲಿ ನಡೆದ ’ಪೋಕ್ಸೊ ಕಾಯ್ದೆ 2012ರ ಸಮರ್ಪಕ ಅನುಷ್ಠಾನ ಕಾರ್ಯಾಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ-ಕಾಲೇಜು, ಒಂಟಿಯಾಗಿರುವ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ತಮಗಾಗಿರುವ ದೌರ್ಜನ್ಯ, ಕಿರುಕುಳ ಮುಂತಾದ ಘಟನೆಗಳನ್ನು ಪೋಷಕರ ಮುಂದೆ ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಇದರ ತನಿಖೆಯನ್ನು ಸೂಕ್ಷ್ಮವಾಗಿ ಕೈಗೊಂಡು, ಶೀಘ್ರವಾಗಿ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದರು.

ಅಪ್ರಾಪ್ತ ವಯಸ್ಸಿನಲ್ಲಿಯೇ ಸಾಮಾಜಿಕ ಜಾಲತಾಣಗಳಲ್ಲಿ ತೊಡಗುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸಂಭವಿಸುತ್ತಿವೆ. ಮಕ್ಕಳು ಸಾಮಾಜಿಕ ಜಾಲತಾಣಗಳಿಂದ ದೂರ ಇರುವಂತೆ ನೋಡಿಕೊಳ್ಳುವುದು ಪೋಷಕರ ಕರ್ತವ್ಯ ಎಂದು ಹೇಳಿದರು.

ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು ಸತ್ಯ ಹೇಳುವುದಕ್ಕೆ ಹೆದರುತ್ತಾರೆ. ಅಲ್ಲದೇ, ಕೆಲವು ಭಾರಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದು ಮಕ್ಕಳ ಅರಿವಿಗಿರುವುದಿಲ್ಲ. ಇಂತಹ ಪ್ರಕರಣಗಳನ್ನು ತನಿಖೆ ಕೈಗೊಳ್ಳುವ ಅಧಿಕಾರಿಗಳು ವೈದ್ಯರು, ಸಂಬಂಧಪಟ್ಟ ಸ್ವಯಂ ಸೇವಾ ಸಂಸ್ಥೆ ಹಾಗೂ ಮನಶಾಸ್ತ್ರಜ್ಞರ ಸಲಹೆ, ಸಹಾಕರ ಪಡೆದುಕೊಂಡರೆ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನೀಲಮಣಿ ನುಡಿದರು.

ಅಪರಾಧ ಮತ್ತು ತಾಂತ್ರಿಕ ಸೇವೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ವಾಣಿ ವಿಲಾಸ ಆಸ್ಪತ್ರೆಯ ಮುಖ್ಯಸ್ಥೆ ಡಾ. ಸವಿತಾ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಡಾ. ಬಿಂದ್ಯಾಶಾಜಿತ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News