ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಆಯ್ಕೆ

Update: 2018-08-05 13:30 GMT

ಬೆಂಗಳೂರು, ಆ.5: ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ಹುಣಸೂರು ಕ್ಷೇತ್ರದ ಶಾಸಕ ಅಡಗೂರು ಎಚ್.ವಿಶ್ವನಾಥ್‌ರನ್ನು ಆಯ್ಕೆ ಮಾಡಲಾಗಿದೆ.

ರವಿವಾರ ನಗರದ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಶ್ವನಾಥ್‌ಗೆ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು.

ಸರ್ವಾನುಮತದಿಂದ ವಿಶ್ವನಾಥ್‌ರನ್ನು ಆಯ್ಕೆ ಮಾಡಿದ್ದೇವೆ. ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದಾಗ ಎಂ.ಪಿ.ಪ್ರಕಾಶ್‌ರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಎರಡೂ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ದೇವೇಗೌಡ ಹೇಳಿದರು. ಒಂದೂವರೆ ತಿಂಗಳ ಹಿಂದೆಯೇ ತನಗೆ ಎರಡು ಜವಾಬ್ದಾರಿ ಬೇಡ ಎಂದು ಹೇಳಿದ್ದರು. ಅದರಂತೆ, ಈಗ ಎಲ್ಲ ಮುಖಂಡರು ಒಮ್ಮತದಿಂದ ಎಚ್.ವಿಶ್ವನಾಥ್ ರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಹೊಸದಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತೇವೆ. ಯುವಕರಿಗೆ ಹೆಚ್ಚಿನ ಅವಕಾಶ ಮಾಡಿಕೊಡುತ್ತೇವೆ. ಹಿಂದುಳಿದವರು, ಮುಸ್ಲಿಮರು ಹಾಗೂ ಲಿಂಗಾಯತರು ಇತರ ವರ್ಗಗಳಿಗೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಅವಕಾಶ ನೀಡುತ್ತೇವೆ ಎಂದು ದೇವೇಗೌಡ ಹೇಳಿದರು.

ಯುವಕರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಆದರೆ, ಹಿರಿಯರನ್ನು ಕಡೆಗಣಿಸುವುದಿಲ್ಲ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ಪಕ್ಷವನ್ನು ಮುನ್ನಡೆಸುತ್ತೇವೆ. 10 ದಿನಗಳಲ್ಲಿ ಮತ್ತೆ ಸಭೆ ನಡೆಸಿ ಪದಾಧಿಕಾರಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದರು. ಆಗಸ್ಟ್ 11 ರಿಂದ ರಾಜ್ಯ ಪ್ರವಾಸ ಮಾಡುತ್ತೇವೆ. ನಿಷ್ಕ್ರಿಯವಾಗಿರುವ ಘಟಕಗಳನ್ನು ಆ ಸಂದರ್ಭದಲ್ಲಿ ಬದಲಾಯಿಸುತ್ತೇವೆ. ಅಲ್ಲಿಯೇ ಹೊಸಬರಿಗೆ ಅವಕಾಶ ನೀಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಆ.17ರಿಂದ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ ಎಂದು ದೇವೇಗೌಡ ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಎಚ್.ವಿಶ್ವನಾಥ್ ಮಾತನಾಡಿ, ಪಕ್ಷದ ಹಿರಿಯರು ನನಗೆ ಮಹತ್ವದ ಜವಾಬ್ದಾರಿ ನೀಡಿದ್ದು, ಅವರಿಗೆ ನಾನು ಅಭಾರಿಯಾಗಿದ್ದೇನೆ. ಈ ದೊಡ್ಡ ಜವಾಬ್ದಾರಿಯನ್ನು ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಭಾಯಿಸುತ್ತೇನೆ ಎಂದರು.

ಪಕ್ಷವನ್ನು ಮುನ್ನಡೆಸಲು ಮಾನಸಿಕವಾಗಿ ಸಿದ್ಧವಾಗಿದ್ದೇನೆ. ಸಮ್ಮಿಶ್ರ ಸರಕಾರದ ತೀರ್ಮಾನಗಳನ್ನು ಜನರಿಗೆ ಅರ್ಥೈಸುವ ಕೆಲಸವನ್ನು ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳಿಸುತ್ತೇವೆ. ಈ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಎಲ್ಲ ಜಾತಿ, ಧರ್ಮದ ಯುವಕ, ಯುವತಿಯರಿಗೆ ಪಕ್ಷದಲ್ಲಿ ಅವಕಾಶ ಕಲ್ಪಿಸಲಾಗುವುದು. ಕೊನೆಯ ಉಸಿರು ಇರುವವರೆಗೆ ಪಕ್ಷಕ್ಕಾಗಿ ದುಡಿಯುತ್ತೇನೆ. ಪಕ್ಷದ ಜೊತೆಯಲ್ಲೆ ನಾನು ಸಾಗುತ್ತೇನೆ ಎಂದು ವಿಶ್ವನಾಥ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News