ಆ.13ರಂದು ಕಾಂಗ್ರೆಸ್ ನಿಂದ ಬೀದರ್‌ನಲ್ಲಿ 'ಜನಧ್ವನಿ' ರ‍್ಯಾಲಿ: ದಿನೇಶ್ ಗುಂಡೂರಾವ್

Update: 2018-08-07 13:52 GMT

ಬೆಂಗಳೂರು, ಆ.7: ಲೋಕಸಭಾ ಚುನಾವಣೆಯ ದಿನಾಂಕ ನಿಗದಿಗೊಳ್ಳುವ ಮೊದಲೆ ಕಾಂಗ್ರೆಸ್ ಪ್ರಚಾರದ ಕಾರ್ಯಯೋಜನೆಗಳನ್ನು ರೂಪಿಸಿದ್ದು, ಆ.13ರಂದು ಬೀದರ್ ನಗರದಲ್ಲಿ ಆಯೋಜಿಸಿರುವ ಜನಧ್ವನಿ ರ್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಭಾಗವಹಿಸಿ ಮಾತನಾಡಲಿದ್ದಾರೆ.

ಕಳೆದ ನಾಲ್ಕು ವರ್ಷದಲ್ಲಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಹಾಗೂ ಇದರಿಂದ ರಾಜ್ಯದ ಜನತೆ ಎದುರಿಸುತ್ತಿರುವ ಸಮಸ್ಯೆಗಳ ವಿವರಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆಯನ್ನು ಸೃಷ್ಟಿಸಲು ಕೆಪಿಸಿಸಿ ಸಿದ್ಧತೆಯಲ್ಲಿ ತೊಡಗಿದೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಸಭಾ ಚುನಾವಣೆ ಪ್ರಚಾರದ ನಂತರ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಬೀದರ್‌ನಲ್ಲಿ ಆಯೋಜಿಸಿರುವ ಜನಧ್ವನಿಯ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ಕುರಿತು ಜನತೆಯಲ್ಲಿ ಅಭಿಪ್ರಾಯ ಮೂಡಿಸಲಿದ್ದಾರೆಂದು ಸ್ಪಷ್ಟಪಡಿಸಿದರು.

ಜನಧ್ವನಿ ರ್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಜತೆಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ಕೆ.ಎಚ್.ಮುನಿಯಪ್ಪ, ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ರ್ಯಾಲಿಯಲ್ಲಿ ಸುಮಾರು 3ಲಕ್ಷಕ್ಕೂ ಹೆಚ್ಚು ಸಾರ್ವಜನಿಕರನ್ನು ಸೇರಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಆ.9ರಂದು ಕ್ವಿಟ್ ಇಂಡಿಯಾ ಕಾರ್ಯಕ್ರಮ: ಬ್ರಿಟಿಷರ ವಿರುದ್ಧ ಆಗಿನ ಕಾಂಗ್ರೆಸ್ ಪಕ್ಷವು ಮಾಡು ಇಲ್ಲವೆ ಮಡಿ ಚಳವಳಿ ಹಮ್ಮಿಕೊಂಡು, ಬ್ರಿಟಿಷರನ್ನು ದೇಶದಿಂದ ತೊಲಗಿಸಿತ್ತು. ಇದರ ನೆನಪನ್ನು ಯುವಜನತೆಗೆ ತಲುಪಿಸುವ ಉದ್ದೇಶದಿಂದ ಪ್ರತಿವರ್ಷ ಆ.9ರಂದು ದೇಶಾದ್ಯಂತ ಕ್ವಿಟ್ ಇಂಡಿಯಾ ಚಳವಳಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.

ಕೆಪಿಸಿಸಿ ವತಿಯಿಂದ ಆ.9ರಂದು ಪುರಭವನದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ ನೆನಪನ್ನು ಸ್ಮರಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದ ಹಿರಿಯ ಸ್ವಾತಂತ್ರ ಹೋರಾಟಗಾರರಿಗೆ ವಿಶೇಷವಾಗಿ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News