ಬೆಂಗಳೂರು: ಆ.9 ರಂದು ರೈತ ಸಂಘದಿಂದ ಜೈಲ್ ಭರೋ ಚಳವಳಿ
ಬೆಂಗಳೂರು, ಆ.7: ಸ್ವಾಮಿನಾಥನ್ ವರದಿ ಜಾರಿಗಾಗಿ ಆಗ್ರಹಿಸಿ, ಬಗರ್‌ಹುಕುಂ ಸಾಗುವಳಿದಾರರಿಗೆ ಉಳುಮೆ ಚೀಟಿ ನೀಡಬೇಕು ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಆ.9 ರಂದು ನಗರದ ಪುರಭವನದ ಎದುರು ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಾಗಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎನ್.ವೆಂಕಟಾಚಲಯ್ಯ, ಹಿಂದಿನ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಡಾ.ಎಂ.ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ತಮ್ಮ ಅಧಿಕಾರದ ಅವಧಿಯಲ್ಲಿ ವರದಿಯನ್ನು ಜಾರಿಗೊಳಿಸುವ ಕುರಿತು ಪ್ರಸ್ತಾಪ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರ ಸ್ವಾಮಿನಾಥನ್ ವರದಿಯನ್ನು ಜಾರಿ ಮಾಡುವುದರಿಂದ ರೈತರು ಬೆಳೆಯುವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ದೊರಕುತ್ತದೆ. ಅಲ್ಲದೆ, ಹೆಚ್ಚಿನ ಜನರು ಕೃಷಿಯ ಕಡೆಗೆ ಆಕರ್ಷಿತರಾಗುತ್ತಾರೆ. ಆದರೆ, ಕೇಂದ್ರ ಸರಕಾರ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ರಸಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ. ಮತ್ತೊಂದು ಕಡೆ ರೈತರಿಗೆ ಸರಿಯಾದ ಸಮಯಕ್ಕೆ ಬ್ಯಾಂಕ್‌ಗಳಲ್ಲಿ ಸಾಲ ಸಿಗದೇ ಪರದಾಡುವಂತಾಗಿದೆ ಎಂದು ಅವರು ಹೇಳಿದರು.
ಹಿಂದಿನ ರಾಜ್ಯ ಸರಕಾರವು ಬಗರ್‌ಹುಕುಂ ಸಾಗುವಳಿದಾರಿಗೆ ಹಕ್ಕುಪತ್ರ ನೀಡಲಾಗುತ್ತದೆ. ಹಾಗೂ ಭೂ ರಹಿತರಿಗೆ ಬೆಂಗಳೂರು ನಗರದ ಸುತ್ತಮುತ್ತಲಿನ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 18 ಕಿ.ಮೀ.ವ್ಯಾಪ್ತಿಯಲ್ಲಿ ಭೂಮಿ ಮಂಜೂರು ಮಾಡುತ್ತೇವೆ ಎಂದು ಭರವಸೆ ನೀಡಿ ವಂಚಿಸಿದೆ. ಹೀಗಾಗಿ, ಇಂದಿನ ಸಮ್ಮಿಶ್ರ ಸರಕಾರವಾದರೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದರು.
ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಭೂಮಿ ಇಲ್ಲದವರಿಗೆ ಭೂಮಿ ನೀಡಬೇಕು. ನಿವೇಶನ ರಹಿತರಿಗೆ ನಿವೇಶನಗಳನ್ನು ಕಟ್ಟಿಸಬೇಕು. ಡಾ.ಎಂ.ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಕೆಪಿಆರ್‌ಎಸ್ ಹಮ್ಮಿಕೊಂಡಿರುವ ಜೈಲ್ ಭರೋ ಚಳವಳಿಗೆ ವಿದ್ಯಾರ್ಥಿ, ಯುವಜನ, ಮಹಿಳಾ ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದು, ಆ.9 ರಂದು 12 ಗಂಟೆಗೆ ಪುರಭವನದ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು