ವಕೀಲ ವಿನೋದ್‌ ತೇಜೋವಧೆ ಆರೋಪ: ಈಶ್ವರಪ್ಪ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Update: 2018-08-09 16:22 GMT

ಬೆಂಗಳೂರು, ಆ.9: ಶಿವಮೊಗ್ಗದ ವಕೀಲ ಬಿ.ವಿನೋದ್ ಅವರ ತೇಜೋವಧೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಬೆಂಗಳೂರಿನ ಚುನಾಯಿತ ಸಂಸದರು ಹಾಗೂ ಶಾಸಕರ ವಿಶೇಷ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ 6 ವಾರ ತಡೆಯಾಜ್ಞೆ ನೀಡಿದೆ.

ಪ್ರಕರಣ ರದ್ದುಕೋರಿ ಈಶ್ವರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತಲ್ಲದೆ, ದೂರುದಾರ ವಕೀಲ ವಿನೋದ್‌ಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ತಮ್ಮ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿ, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವ ಈಶ್ವರಪ್ಪ ತಮ್ಮ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿದ್ದ ವಕೀಲ ವಿನೋದ್, ಈ ಸಂಬಂಧ ಶಿವಮೊಗ್ಗದ 2ನೆ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

ದೂರು ಅಂಗೀಕರಿಸಿದ್ದ ಕೋರ್ಟ್, 2017ರ ಆ.5ರಂದು ಈಶ್ವರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು. ಬಳಿಕ, ಪ್ರಕರಣ ಸಂಸದರು ಹಾಗೂ ಶಾಸಕರ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಈ ಪ್ರಕರಣ ಮತ್ತದರ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News