ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿಲ್ಲ: ಎಚ್.ಡಿ.ಕುಮಾರಸ್ವಾಮಿ

Update: 2018-08-12 14:53 GMT

ಹುಬ್ಬಳ್ಳಿ, ಆ.12: ನಮ್ಮ ಸರಕಾರದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಬಜೆಟ್‌ನಲ್ಲಿ ಈ ಭಾಗಕ್ಕೆ ಹಲವು ಯೋಜನೆಗಳನ್ನು ನೀಡಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ಸೋಲಾರ್ ಪ್ಯಾನಲ್ ಉತ್ಪಾದನಾ ಘಟಕ, ಬೀದರ್‌ನಲ್ಲಿ ಕೃಷಿ ಉಪಕರಣ ಉತ್ಪಾದನಾ ಘಟಕ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳಿಗೂ ಯೋಜನೆಗಳನ್ನು ನೀಡಿದ್ದೇವೆ ಎಂದರು.

ಹುಬ್ಬಳ್ಳಿ-ಧಾರವಾಡ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬೇಕೆಂಬುದು ನಮ್ಮ ಚಿಂತನೆ. ಮುಂದಿನ ದಿನಗಳಲ್ಲಿ ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಆಗಿರುವ ಮಳೆಯ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ವಿಧಾನ ಅಳವಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮುಂದಿನ ವಾರ ಮಹಾದಾಯಿ ವಿವಾದದ ಕುರಿತು ತೀರ್ಪು ಬರುವ ಸಾಧ್ಯತೆಯಿದೆ. ತೀರ್ಪು ಯಾವುದೇ ರೀತಿಯಲ್ಲಿ ಬರಲಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಈ ಭಾಗದಲ್ಲಿ ಪ್ರವಾಸ ಮಾಡಿ, ಪ್ರತಿ ಜಿಲ್ಲೆಯ ಒಂದು ಪಂಚಾಯತ್ ಗೆ ತೆರಳಿ, ಇಡೀ ದಿನ ಅಲ್ಲಿದ್ದು ಜನರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News