ಆ.25ರವರೆಗೆ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

Update: 2018-08-16 07:26 GMT

ಮಂಗಳೂರು, ಆ.16: ಶಿರಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತದಂತಹ ಅನಾಹುತ ಇನ್ನೂ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಇಂದಿನಿಂದ(ಆ.16ರಿಂದ) ಆ.25ವರೆಗೆ ವಾಹನಗಳ ಸಂಪೂರ್ಣ ಸಂಚಾರ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದ ಆ.25ರ ಬೆಳಗ್ಗೆ 6 ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

ಕಳೆದ ನಾಲ್ಕೈದು ದಿನಗಳಿಂದ ಶಿರಾಡಿ ಘಾಟ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದ ಬೃಹತ್ ಮರಗಳ ಸಹಿತ ಭಾರೀ ಪ್ರಮಾಣದ ಮಣ್ಣು ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ರಸ್ತೆಗೆ ಬಿದ್ದಿದೆ. ಇವುಗಳನ್ನು ತೆರವುಗೊಳಿಸಲು ಹಾಗೂ ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ ಭೂಕುಸಿತದಂತಹ ಹಾನಿ ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರು ದಿನಗಳ ಕಾಲ ಈ ಹೆದ್ದಾರಿಯಲ್ಲಿ ಸಂಪೂರ್ಣವಾಗಿ ವಾಹನಗಳ ಸಂಚಾರವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News