ಕಾಂಗ್ರೆಸ್ ಕಾರ್ಯಕರ್ತರು ದೇಶದ ಐಕ್ಯತೆ ಉಳಿಸಬೇಕು: ದಿನೇಶ್ ಗುಂಡೂರಾವ್

Update: 2018-08-16 16:16 GMT

ಬೆಂಗಳೂರು, ಆ.16: ದೇಶದಲ್ಲಿ ಐಕ್ಯತೆಯನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.  

ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಡಾ. ಗಿರೀಶ್ ಕೆ. ನಾಶಿ ಫೌಂಡೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘವಾದ ಇತಿಹಾಸ ಇದೆ. ದೇಶಕ್ಕೆ ಸ್ವಾತಂತ್ರವನ್ನು ತಂದುಕೊಡಲು ಕಾಂಗ್ರೆಸ್‌ನ ಮಹನೀಯರು ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಿರುವ ಇತಿಹಾಸ ಬೇರೆ ಯಾವುದೇ ಪಕ್ಷಕ್ಕೆ ಇಲ್ಲ ಎಂದರು. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಚುನಾವಣಾ ಸಮಯದಲ್ಲಿ ನೀಡಿರುವ ಬಹುತೇಕ ಭರವಸೆಗಳನ್ನು ಈಡೇರಿಸಿಲ್ಲ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಹುಸಿ ಭರವಸೆ ನೀಡಿ, ಉದ್ಯೋಗ ನೀಡುವಲ್ಲಿ ವಿಫಲರಾಗಿದ್ದಾರೆ. ಯುವಕರು ಉದ್ಯೋಗ ಕೇಳಿದರೆ, ತಾವು ಕೂಡ ಪಕೋಡ ಮಾರಿ ಮುಂದೆ ಬಂದಿದ್ದೇನೆ. ಅದನ್ನು ನೀವು ಮಾಡಿ ಎಂದು ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ಕೊಡುವ ಉದ್ದೇಶದಿಂದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಈಗಿನಿಂದಲೇ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಮಾಜಿ ಶಾಸಕ ನಂಜಯ್ಯನ ಮಠ ಮಾತನಾಡಿ, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಮೊದಲ ಬಾರಿಗೆ ಒಬ್ಬ ಯುವ ಮುಖಂಡನಿಗೆ ಪಕ್ಷದ ಸಾರಥ್ಯವನ್ನು ಪಕ್ಷದ ವರಿಷ್ಠರು ವಹಿಸಿದ್ದಾರೆ. ಹಿರಿಯ ಮುಖಂಡರು ತಮ್ಮಲ್ಲಿರುವ ಆಂತರಿಕ ಕಚ್ಚಾಟಗಳನ್ನು ಬದಿಗಿರಿಸಿ ಪಕ್ಷವನ್ನು ಕಟ್ಟಲು ಮುಂದಾಗಬೇಕು ಎಂದರು.

ಡಾ. ಗಿರೀಶ್ ಕೆ. ನಾಶಿ ಫೌಂಡೇಷನ್ ಅಧ್ಯಕ್ಷ ಗಿರೀಶ್ ಮಾತನಾಡಿ, ದಿನೇಶ್ ಗುಂಡೂರಾವ್ ಹಾಗೂ ಪಕ್ಷದ ಎಲ್ಲ ಹಿರಿಯ ಮುಖಂಡರ ನೇತೃತ್ವದಲ್ಲಿ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಅವಶ್ಯಕತೆ ಇದೆ ಎಂದು ಹೇಳಿದರು. ಸಮಾರಂಭದಲ್ಲಿ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಆರಾಧ್ಯ, ಬಿಬಿಎಂಪಿ ನಾಮನಿರ್ದೇಶನ ಸದಸ್ಯ ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News