ಆ.18: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗೆ ಕೇಂದ್ರ ಸಚಿವ ಡಿವಿಎಸ್ ಭೇಟಿ

Update: 2018-08-17 12:15 GMT

ಬೆಂಗಳೂರು, ಆ. 17: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಮಳೆ ಹಾಗೂ ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿವಿ ಸದಾನಂದ ಗೌಡ ಆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸದಾನಂದಗೌಡ, ‘ನಾನು ನಾಳೆ ಮತ್ತು ನಾಡಿದ್ದು ಕೇಂದ್ರ ಸರಕಾರದ ಪರವಾಗಿ ಮಳೆ ಹಾನಿಗೆ ತತ್ತರಿಸಿರುವ ಕೊಡಗು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು ದಿನಪೂರ್ತಿ ಅಲ್ಲೇ ಇರಲಿದ್ದೇನೆ. ಅದೇ ರೀತಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮಳೆ ಹಾನಿಗೊಳಗಾದ ಜನರೊಂದಿಗೆ ಇದ್ದು ಜಿಲ್ಲಾಡಳಿತದ ಸಭೆ ನಡೆಸಲಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಕೆಲವು ದಿನಗಳಿಂದ ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಇದರ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವು ಮನೆಗಳು ಜಲಾವೃತವಾಗಿದ್ದು, ಮಳೆಗೆ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೊಡಗಿನಲ್ಲಿ ಈಗಾಗಲೇ ಮಳೆಯಲ್ಲಿ ನಿರಾಶ್ರಿತರಾದವರಿಗೆ 10 ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಸಿ ಗುಡ್ಡದಲ್ಲಿ ಸಿಲುಕಿಕೊಂಡವರ ರಕ್ಷಣೆ ನಡೆಯುತ್ತಿದೆ. ಕೊಡಗಿನಲ್ಲಿ ಕುಸಿದು ಬಿದ್ದು ರಸ್ತೆ ಸಂಪರ್ಕ ಕಡಿತಕ್ಕೆ ಕಾರಣವಾಗಿರುವ ರಸ್ತೆಗಳ ದುರಸ್ತಿಗಾಗಿ ಲೋಕೋಪಯೋಗಿ ಇಲಾಖೆಯ ಉಪವಿಭಾಗೀಯ ಕಚೇರಿಯನ್ನೇ ಮಡಿಕೇರಿಯಲ್ಲಿ ತೆರೆಯಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News