ಚಿಕ್ಕಮಗಳೂರು: ಕಟ್ಟಡಗಳ ದುರಸ್ತಿಗೆ ಶಿಕ್ಷಣ ಇಲಾಖೆ ನಿರ್ಲಕ್ಷ್ಯ; ಆರೋಪ

Update: 2018-08-18 16:54 GMT

ಚಿಕ್ಕಮಗಳೂರು, ಆ.18: ಜಿಲ್ಲಾ ಕೇಂದ್ರದಲ್ಲಿರುವ ಕೆಲವೇ ಕೆಲವು ಸರಕಾರಿ ಪದವಿ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಡ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಕುಸಿದು ಬೀಳುವ ಹಂತದಲ್ಲಿವೆ. ಯಾವುದೇ ಮೂಲ ಸೌಕರ್ಯಗಳಿಲ್ಲದ ಈ ಕಾಲೇಜು ಕಟ್ಟಡಗಳಲ್ಲಿ ವಿದ್ಯಾರ್ಥಿಗಳು ಜೀವ ಭಯದಲ್ಲಿ ಶಿಕ್ಷಣ ಪಡೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದನ್ನೂ ಕಂಡೂ ಕಾಣದಂತಿದ್ದಾರೆಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಆರೋಪಿಸಿದ್ದಾರೆ.

ಶನಿವಾರ ಅವರು ವಿವಿಧ ಪ್ರಗತಿಪರ, ರೈತ, ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿರುವ ಜೂನಿಯರ್ ಕಾಲೇಜು, ಎನ್‍ಎಂಸಿ ವೃತ್ತದಲ್ಲಿರುವ ಪದವಿ ಕಾಲೇಜು ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಪಿಯುಸಿ ಕಾಲೇಜಿಗೆ ಭೇಟಿ ನೀಡಿ ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಸರಕಾರಿ ಪದವಿ ಹಾಗೂ ಪಿಯುಸಿ ಕಾಲೇಜುಗಳಿರುವುದೇ ನಾಲ್ಕು. ಈ ಪೈಕಿ ಯಾವ ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವಿಲ್ಲ. ಕಾಲೇಜುಗಳ ಕಟ್ಟಡಗಳು ಸಾಕಷ್ಟು ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿವೆ. ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯದೇ ದಶಕ ಕಳೆದಿವೆ. ಕಟ್ಟಡಗಳ ಚಾವಣಿ ಸೂರುತ್ತಿದ್ದು, ಗಾರೆ ಕಳಚಿ ಬೀಳುತ್ತಿವೆ. ಕೆಲ ಕಾಲೇಜುಗಳಲ್ಲಿ ಶೌಚಾಲಯ, ನೀರಿನಂತಹ ಮೂಲಸೌಕರ್ಯಗಳೂ ಇಲ್ಲ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಕಂಡೂ ಕಾಣದಂತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಸರಕಾರಿ ಕಾಲೇಜುಗಳಲ್ಲಿ ಪ್ರತೀ ವರ್ಷ ಉತ್ತಮ ಫಲಿತಾಂಶ ಬರುತ್ತಿವೆ. ಕಾಲೇಜಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಪ್ರತೀ ವರ್ಷ ಹೆಚ್ಚುತ್ತಿದೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾಲೇಜು ಕೊಠಡಿಗಳಿಲ್ಲ. ಕೆಲ ಕಾಲೇಜುಗಳಲ್ಲಿ ಉಪನ್ಯಾಸಕರು ಹಾಗೂ ಇತರ ಸಿಬ್ಬಂದಿ ಕೊರತೆ ಇದೆ. ಕ್ಷೇತ್ರದ ಶಾಸಕರು ಹಾಗೂ ಜನಪ್ರತಿನಿಧಿಗಳು ಕಾಲೇಜುಗಳಿಗೆ ಭೇಟಿ ನೀಡದಿರುವುದರಿಂದ ವಿದ್ಯಾರ್ಥಿಗಳ ಸಮಸ್ಯೆ ಅವರ ಗಮನಕ್ಕೆ ಬರುತ್ತಿಲ್ಲ. ಬಡ ವಿದ್ಯಾರ್ಥಿಗಳು ಕಲಿಯುತ್ತಿರುವುದರಿಂದ ಅವರ ಬಗ್ಗೆ ಜನಪ್ರತಿನಿಧಿಗಳು ನಿರ್ಲಕ್ಷ್ಯಿಸಿದ್ದಾರೆಂದು ಆರೋಪಿಸಿದರು.

ಸಿಪಿಐ ಮುಖಂಡ ಅಮ್ಜದ್ ಮಾತನಾಡಿ, ನಗರದ ಸರಕಾರಿ, ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜುಗಳ ಕಟ್ಟಡಗಳು ಶಥಿಲಾವಸ್ಥೆಯಲ್ಲಿವೆ. ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಪ್ರತೀ ವರ್ಷ ಲ್ಯಾಬ್ ಪರೀಕ್ಷೆಗಳು ನಡೆಯುತ್ತವೆ. ಆದರೆ ಕಾಲೇಜಿನ ಲ್ಯಾಬ್ ಕೊಠಡಿ ಶಿಥಿಲಾವಸ್ಥೆಯಲ್ಲಿದೆ. ಕೊಠಡಿ ಸೂರುತ್ತಿದ್ದರೂ ದುರಸ್ತಿಗೆ ಅಧಿಕಾರಿಗಳು ಮುಂದಾಗಿಲ್ಲ. ಲ್ಯಾಬ್ ಸಲಕರಣೆಗಳು ಮಳೆ ನೀರಿನಿಂದ ಒದ್ದೆಯಾಗಿ ಹಾಳಾಗಿವೆ. ಪ್ರಯೋಗಾಲದ ನಿರ್ವಹಣೆಯನ್ನೇ ಮಾಡುತ್ತಿಲ್ಲ. ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳೂ ಗಮನ ಹರಿಸುತ್ತಿಲ್ಲ. ಸರಕಾರಿ ಶಿಕ್ಷಣ ವ್ಯವಸ್ಥೆಯನ್ನೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಾಶ ಮಾಡಲು ಮುಂದಾಗಿದ್ದಾರೆಂದು ಆರೋಪಿಸಿದ ಅವರು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೇವೆ. ಜಿಲ್ಲಾಧಿಕಾರಿಗಳು ಕೆಲ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಸುವುದಾಗಿ ತಿಳಿಸಿದ್ದಾರೆಂದರು.

ಈ ವೇಳೆ ರೈತ ಸಂಘದ ಗುರುಶಾಂತಪ್ಪ, ಕನ್ನಡ ಪರ ಸಂಘಟನೆಗಳ ರಾಜೇಗೌಡ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರಾದ ಅನಿಲ್ ಆನಂದ್, ಮರ್ಲೆ ಅಣ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.

ಶಿಥಿಲಾವಸ್ಥೆಯಲ್ಲಿರುವ ಸರಕಾರಿ ಕಾಲೇಜು ಕಟ್ಟಡಗಳ ದುರಸ್ತಿ ಹಾಗೂ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮವಹಿಸಲು ಮುಂದಾಗಬೇಕು. ಕಾಲೇಜುಗಳಲ್ಲಿರುವ ಉಪನ್ಯಾಸಕರು ಹಾಗೂ ಸಿಬ್ಬಂದಿ ಕೊರತೆಯನ್ನು ಶೀಘ್ರ ನೀಗಿಸಬೇಕು. ಇನ್ನು 15 ದಿನಗಳಲ್ಲಿ ಈ ಬಗ್ಗೆ ಕ್ರಮವಹಿಸದಿದ್ದಲ್ಲಿ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು.
- ಕೆ.ಟಿ.ರಾಧಾಕೃಷ್ಣ, ಬಿಎಸ್ಪಿ ಜಿಲ್ಲಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News