ಪುಟ್ಟೇನಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ನೀರು: ಸ್ಥಳೀಯರು, ವಿದ್ಯಾರ್ಥಿಗಳಿಂದ ಪ್ರತಿಭಟನೆ

Update: 2018-08-20 18:18 GMT

ಬೆಂಗಳೂರು, ಆ.20: ಕಾರ್ಖಾನೆಗಳು ಹಾಗೂ ಅಪಾರ್ಟ್‌ಮೆಂಟ್‌ಗಳಿಂದ ಯಲಹಂಕದ ಪುಟ್ಟೇನಹಳ್ಳಿ ಕೆರೆಗೆ ಹರಿದುಬರುತ್ತಿರುವ ತ್ಯಾಜ್ಯ ನೀರನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಪುಟ್ಟೇನಹಳ್ಳಿ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ಐಟಿಸಿ ಕಾರ್ಖಾನೆಯ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಯಲಹಂಕ-ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿದ ನೂರಾರು ಪ್ರತಿಭಟನಾಕಾರರು, ಕೆರೆ ಉಳಿಸಿ, ಪರಿಸರ ಸಂರಕ್ಷಿಸಿ ಎಂಬ ಜಾಗೃತಿ ಬರಹಗಳುಳ್ಳ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಟ್ರಸ್ಟ್ ಸದಸ್ಯ ಟಿ.ಕೆ.ಪುಟ್ಟಸ್ವಾಮಿ, ಕೆರೆ ಸುತ್ತ ಮುತ್ತಲ ಪ್ರದೇಶಗಳಲ್ಲಿರುವ ಅಪಾರ್ಟ್‌ಮೆಂಟ್‌ಗಳು, ಬಿಎಂಟಿಸಿ 11 ಮತ್ತು 30ನೆ ಘಟಕ ಹಾಗೂ ಉಪನಗರ 4 ಮತ್ತು 5ನೆ ಹಂತದಲ್ಲಿರುವ ಕಾರ್ಖಾನೆಗಳಿಂದ ಹೊರಬರುತ್ತಿರುವ ಕೊಳಚೆನೀರು ಕೆರೆಗೆ ಸೇರುತ್ತಿದೆ. ಇದರಿಂದ ಕೆರೆಯ ಸುತ್ತಮುತ್ತಲ ಬಡಾವಣೆಗಳಲ್ಲಿ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸಬೇಕಾಗಿದೆ ಎಂದು ತಿಳಿಸಿದರು.

ಕೊಳಚೆ ನೀರನ್ನು ತಡೆಗಟ್ಟಬೇಕೆಂದು ಸ್ಥಳೀಯ ನಾಗರಿಕರು ಹಾಗೂ ಸಂಘ-ಸಂಸ್ಥೆಗಳ ಸದಸ್ಯರು ಸರಕಾರಕ್ಕೆ ಹಲವು ಬಾರಿ ಮನವಿ ನೀಡಿ, ಹೋರಾಟಗಳನ್ನು ಮಾಡುತ್ತಿದ್ದರೂ ಬೆಂಗಳೂರು ಜಲಮಂಡಳಿ ಅಧಿಕಾರಿಗಳು, ಕೇವಲ ಆಶ್ವಾಸನೆಗಳನ್ನು ನೀಡುತ್ತಾ ಕಾಲ ದೂಡುತ್ತಿದ್ದಾರೆ. ಇದರಿಂದ ಇಲ್ಲಿನ ನಿವಾಸಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಶಾಸಕ ಎಸ್.ಆರ್..ವಿಶ್ವನಾಥ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, 10 ಕೋಟಿ ರೂ. ವೆಚ್ಚದಲ್ಲಿ ಕೆರೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಕೆರೆಯ ದಡದಲ್ಲಿ 5 ಎಂಎಲ್ಡಿ ಸಾಮರ್ಥ್ಯದ ಶುದ್ಧನೀರು ಸಂಸ್ಕರಣಾ ಘಟಕ ಸ್ಥಾಪಿಸಲು ಈಗಾಗಲೆ 5 ಕೋಟಿ ರೂ.ಬಿಡುಗಡೆಯಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ಕಾಮಗಾರಿ ವಿಳಂಬವಾಗಿದ್ದು, ಇದರಿಂದ ಜನರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೂಡಲೇ ಸಂಸ್ಕರಣಾ ಘಟಕವನ್ನು ದುರಸ್ಥಿಗೊಳಿಸಲು ಸರಕಾರಕ್ಕೆ ಮತ್ತೊಮ್ಮೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News