ರಾಜ್ಯಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ದಿನೇಶ್‌ ಗುಂಡೂರಾವ್ ಆಗ್ರಹ

Update: 2018-08-21 14:15 GMT

ಬೆಂಗಳೂರು, ಆ.21: ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರಧಾನಿ ನರೇಂದ್ರಮೋದಿ, ರಾಜ್ಯಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗಿನಲ್ಲಿ ಮಳೆ ನಿಂತ ನಂತರ ಸಮಸ್ಯೆಗಳು ಉಲ್ಬಣವಾಗುತ್ತವೆ. ನಮ್ಮ ಶಾಸಕರು ಮತ್ತು ಪದಾಧಿಕಾರಿಗಳು 10 ಕೋಟಿ ರೂ.ದೇಣಿಗೆ ನೀಡಿದ್ದಾರೆ. ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಈ ಮೊತ್ತವನ್ನು ಖರ್ಚು ಮಾಡಲಾಗುವುದು ಎಂದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆ ಆ.23ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ, ಅಲ್ಲೆ ವಾಸ್ತವ್ಯ ಹೂಡುತ್ತೇವೆ. ಪಕ್ಷದ ವತಿಯಿಂದ ಸಂತ್ರಸ್ತರಿಗೆ ಯಾವ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವೋ, ಅದನ್ನು ಪೂರೈಕೆ ಮಾಡುತ್ತೇವೆ ಎಂದು ದಿನೇಶ್‌ ಗುಂಡೂರಾವ್ ತಿಳಿಸಿದರು.

ಕೇರಳ ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯ ಕುರಿತು ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರಮೋದಿ, ನಮ್ಮ ರಾಜ್ಯದ ಕೊಡಗು ಜಿಲ್ಲೆಗೂ ಭೇಟಿ ನೀಡಬಹುದಿತ್ತು. ಒಂದು ವೇಳೆ ಅವರಿಗೆ ಇಲ್ಲಿ ಭೇಟಿ ನೀಡಲು ಸಾಧ್ಯವಾಗದಿದ್ದರೆ ಹೆಚ್ಚಿನ ನೆರವನ್ನಾದರೂ ನೀಡಲಿ ಎಂದ ಅವರು, ಈ ಸಂಬಂಧ ಮುಖ್ಯಮಂತ್ರಿ, ಪ್ರಧಾನಿಗೆ ಪತ್ರವನ್ನು ಬರೆದಿದ್ದಾರೆ ಎಂದರು.

ಕೊಡಗು ಜಿಲ್ಲೆಯಲ್ಲಿ ಬಿಜೆಪಿಯ ಶಾಸಕರೇ ಗೆದ್ದಿದ್ದಾರೆ. ಬಿಜೆಪಿಯ ಸಂಸದರು ಇಷ್ಟು ವರ್ಷ ಕೊಡಗು ಜಿಲ್ಲೆಗೆ ನ್ಯಾಯ ಕೊಡಿಸಲು ಆಗಿಲ್ಲ. ಇನ್ನಾದರೂ ಅವರು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ಕೊಡಗು ಜಿಲ್ಲೆಗೆ ಅಗತ್ಯ ನೆರವನ್ನು ಒದಗಿಸುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಲಿ ಎಂದು ದಿನೇಶ್‌ ಗುಂಡೂರಾವ್ ಒತ್ತಾಯಿಸಿದರು.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉಂಟಾಗಿರುವ ನೆರೆ ಸಮಸ್ಯೆಗಳ ಕುರಿತು 10 ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಿಂದ ರಾಜ್ಯ ಪ್ರವಾಸ ಆರಂಭವಾಗಲಿದೆ. ಉಡುಪಿ, ಮಂಗಳೂರು, ದಾವಣಗೆರೆ, ಧಾರವಾಡ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ದಿನೇಶ್‌ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News