ಆ.24: ಕೊಡಗು ಜಿಲ್ಲೆಗೆ ರಕ್ಷಣಾ ಸಚಿವೆ ಭೇಟಿ

Update: 2018-08-23 15:56 GMT

ಬೆಂಗಳೂರು, ಆ. 23: ಸತತ ಮಳೆ-ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ಜಿಲ್ಲೆಯ ನಿರಾಶ್ರಿತರ ಕೇಂದ್ರಕ್ಕೆ ನಾಳೆ(ಆ.24) ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ 8:30ಕ್ಕೆ ಮೈಸೂರಿನಿಂದ ಹೊರಟು 9ಕ್ಕೆ ಹಾರಂಗಿ ಹೆಲಿಪ್ಯಾಡ್ ತಲುಪಲಿದ್ದಾರೆ. ಅನಂತರ ಕುಶಾಲನಗರ ನೆರೆ ಪೀಡಿತ ಪ್ರದೇಶಗಳಾದ ಕುವೆಂಪು ಬಡಾವಣೆ, ಸಾಯಿ ಬಡಾವಣೆಗಳಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ. 10:30ಕ್ಕೆ ಮಾದಾಪುರದಲ್ಲಿ ಭೂಕುಸಿತಕ್ಕೆ ಒಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ. 11:15ಕ್ಕೆ ಮೈತ್ರಿ ಹಾಲ್‌ನಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ತಿಳಿಸಲಾಗಿದೆ.

11:30ಕ್ಕೆ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಈ ವೇಳೆ ಅವರೊಂದಿಗೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜೆ.ಬೋಪಯ್ಯ ಇರಲಿದ್ದಾರೆ.

ಸತತ ಮಳೆ-ಪ್ರವಾಹಕ್ಕೆ ಸಿಲುಕಿ 21 ಮಂದಿ ಮೃತಪಟ್ಟು, ಅನೇಕ ಮಂದಿ ಆಶ್ರಯ ಕಳೆದುಕೊಂಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ನೀಡಿರುವ ಹೆಲಿಕಾಪ್ಟರ್, ಸೇನಾಪಡೆ ಕಾರ್ಯಾಚರಣೆ ಬಗ್ಗೆಯೂ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಪ್ರಧಾನಿಗೆ ವರದಿ ಸಾಧ್ಯತೆ: ಮಳೆ-ಪ್ರವಾಹ, ಗುಡ್ಡ ಕುಸಿತದಿಂದ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಪ್ರಧಾನಿ ಕಚೇರಿಗೆ ಅದನ್ನು ತಲುಪಿಸಿ ಕರ್ನಾಟಕಕ್ಕೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಪ್ರಧಾನಿ ಮೋದಿಯವರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News