ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿ: ಸಿದ್ದರಾಮಯ್ಯ

Update: 2018-08-25 11:54 GMT

ಚನ್ನರಾಯಪಟ್ಟಣ,ಆ.25: ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ಮನೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಸಾಲಮನ್ನಾದಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು, ನಗರ, ಪಟ್ಟಣಗಳ ಅಭಿವೃದ್ಧಿಗೆ ಹೆಚ್ಚಿನ ಹಣವನ್ನು ನಮ್ಮ ಸರ್ಕಾರ ನೀಡಿತ್ತು. ಹಾಸನ ಜಿಲ್ಲೆಯಲ್ಲಿ ಜೆ.ಡಿಎಸ್ ಕಾಂಗ್ರೆಸ್ ಪ್ರಾಬಲ್ಯವಿದ್ದು, ಇಲ್ಲಿ ಬಿಜೆಪಿ ನಗಣ್ಯ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮನೆಮನೆಗೆ ತೆರಳಿ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿ ಮತಯಾಚಿಸಬೇಕು ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾತಿ ಹಾಗೂ ಹಣದ ಪ್ರಭಾವ ಹೆಚ್ಚಾಗಿ ನಡೆದ ಕಾರಣ ನಮಗೆ ಸೋಲಾಯಿತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ವಾತಾವಾರಣ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜವಗಲ್ ಮಂಜುನಾಥ್, ಎಪಿಎಂಸಿ ಸದಸ್ಯ ಎಂ.ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜು, ಮಾಜಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ಬಾಬು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News