ಅತಿವೃಷ್ಟಿಯಿಂದ ಬೆಳೆ ನಷ್ಟ ಕುರಿತು ಆ.27ರಂದು ಮಧ್ಯಂತರ ವರದಿ ಸಲ್ಲಿಕೆ: ಕುಮಾರಸ್ವಾಮಿ

Update: 2018-08-25 15:02 GMT

ಬೆಂಗಳೂರು, ಆ.25: ಅತಿವೃಷ್ಟಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಷ್ಟದ ಕುರಿತು ಸಮೀಕ್ಷೆ ನಡೆಯುತ್ತಿದ್ದು ಈ ಕುರಿತು ಅಧಿಕಾರಿಗಳು ಸೋಮವಾರ(ಆ.27) ಮಧ್ಯಂತರ ವರದಿ ಸಲ್ಲಿಸಲಿದ್ದಾರೆ. ಆ.31ರಂದು ನಡೆಯಲಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ಚಟುವಟಿಕೆಗಳು ಮತ್ತು ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದ ಮಳೆ ಪರಿಸ್ಥಿತಿ, ಬಿತ್ತನೆ ಪ್ರಮಾಣ ಹಾಗೂ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿರುವ ಬೆಳೆನಷ್ಟ, ಇಲಾಖೆಯ ವಿವಿಧ ಯೋಜನೆಗಳು, ಆಯವ್ಯಯದಲ್ಲಿ ಘೋಷಿಸಲಾದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

ಮಳೆ ಹಾಗೂ ಬೆಳೆ ಪರಿಸ್ಥಿತಿ ಬಗ್ಗೆ ಚರ್ಚೆ: ಕೊಡಗು ಮತ್ತು ಇತರೆ ಕೆಲವು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಬೆಳೆ ಹಾನಿ ಆಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಮುಖ್ಯಮಂತ್ರಿ ಸೂಚಿಸಿದರು. ಪ್ರವಾಹದಿಂದಾಗಿ 20 ಸಾವಿರ ಹೆಕ್ಟೇರ್, ಮಳೆ ಕೊರತೆಯಿಂದಾಗಿ 11 ಲಕ್ಷ ಹೆಕ್ಟೇರ್, ಸೈನಿಕ ಹುಳುವಿನ ಬಾಧೆಯಿಂದಾಗಿ 86 ಸಾವಿರ ಹೆಕ್ಟೇರ್ ಹಾನಿಯಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

2018-19ನೆ ಸಾಲಿಗೆ ಮಂಡಿಸಲಾದ ಎರಡು ಆಯವ್ಯಯಗಳಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 26 ಕಾರ್ಯಕ್ರಮ ರೂಪಿಸಲಾಗಿದ್ದು, ಈವರೆಗೆ 13 ಕಾರ್ಯಕ್ರಮಗಳ ಕುರಿತು ಸರಕಾರಿ ಆದೇಶ ಹೊರಡಿಸಲಾಗಿದೆ ಎಂದು ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಯು.ಎಂ.ಮಹೇಶ್ವರ ರಾವ್ ತಿಳಿಸಿದರು.

ಕೃಷಿಭಾಗ್ಯ ಯೋಜನೆಯಡಿ ಈ ವರ್ಷ 70 ಸಾವಿರ ಕೃಷಿ ಹೊಂಡ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈವರೆಗೆ ಸುಮಾರು 30 ಸಾವಿರ ಕೃಷಿ ಹೊಂಡಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಕೃಷಿ ಹೊಂಡ ನಿರ್ಮಾಣ ಸಂದರ್ಭದಲ್ಲಿ ಜನ, ಜಾನುವಾರುಗಳಿಗೆ ಪ್ರಾಣಾಪಾಯ ತಪ್ಪಿಸಲು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ನೀರಿನ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಭತ್ತದ ನೇರ ಬಿತ್ತನೆ ಕಾರ್ಯಕ್ರಮವನ್ನೂ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸುವಂತೆ ಸೂಚಿಸಿದರು. ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅಳವಡಿಕೆಗೆ ಸಂಬಂಧಿಸಿದಂತೆ ರಚಿಸಲಾದ ಸಮಿತಿಯು ಮುಂದಿನ ತಿಂಗಳು ಇಸ್ರೇಲ್‌ಗೆ ತೆರಳಲಿದ್ದು, ಸೆಪ್ಟೆಂಬರ್ ಅಂತ್ಯದ ವೇಳೆಗೆ ಕ್ರಿಯಾಯೋಜನೆ ಸಿದ್ಧಪಡಿಸಿ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ, ಈ ಪದ್ಧತಿಯಲ್ಲಿ ತಂತ್ರಜ್ಞಾನದ ಬಳಕೆಯ ಕುರಿತು ಅಧ್ಯಯನಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಚರ್ಚಿಸಲಾಯಿತು. ಈ ಬಗ್ಗೆ 10 ಕೃಷಿ ವಲಯಗಳಲ್ಲಿ ಪ್ರತಿ ಕೃಷಿ ವಲಯದಲ್ಲಿ 2 ಸಾವಿರ ಹೆಕ್ಟೇರ್‌ನಂತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ಇಲಾಖೆಯ ನೇತೃತ್ವದಲ್ಲಿ ಪ್ರತಿ ವರ್ಷ 20 ಸಾವಿರ ಹೆಕ್ಟೇರ್‌ನಂತೆ 5 ವರ್ಷಗಳಲ್ಲಿ 1 ಲಕ್ಷ ಹೆಕ್ಟೇರ್ ಅನ್ನು ಇದರ ವ್ಯಾಪ್ತಿಗೆ ತರಲು ಸಭೆಯಲ್ಲಿ ಸೂಚಿಸಲಾಯಿತು.

ಕೃಷಿ ಇಲಾಖೆಯ ಕಾರ್ಯಕ್ರಮಗಳ ಕುರಿತು, ಕೃಷಿ ಚಟುವಟಿಕೆಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಅರಿವು ಮೂಡಿಸುವ ಉದ್ದೇಶ ಹೊಂದಿದ್ದು, ಈ ಕಾರ್ಯಕ್ರಮ ಜಾರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಆದೇಶಿಸಿದರು.

ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ, ಕರ್ನಾಟಕವು ಕೃಷಿ, ತೋಟಗಾರಿಕಾ ವಲಯದಲ್ಲಿ ಇತರ ರಾಜ್ಯಗಳಲ್ಲಿ ಮಾದರಿಯಾಗುವಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News