ಮರಳು ಮಾಫಿಯಾ ನಿಯಂತ್ರಣಕ್ಕೆ ಮುಖ್ಯಮಂತ್ರಿ ಸೂಚನೆ

Update: 2018-08-25 15:06 GMT

ಬೆಂಗಳೂರು, ಆ.25: ರಾಜ್ಯದಲ್ಲಿ ಮರಳು ಮಾಫಿಯಾ ನಿಯಂತ್ರಣಕ್ಕೆ ತಂದು ಸರಕಾರಕ್ಕೆ ಆದಾಯ ಬರುವಂತೆ ಹಾಗೂ ಜನಸಾಮಾನ್ಯರಿಗೆ ಸುಲಭವಾಗಿ ಮರಳು ದೊರಕಲು ಮರಳು ನೀತಿಯಲ್ಲಿ ಅಗತ್ಯ ಮಾರ್ಪಾಡು ಮಾಡಲು ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮರಳು ಮತ್ತು ಕಲ್ಲು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿ, ಅಕ್ರಮಕ್ಕೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕಟ್ಟಪ್ಪಣೆ ಮಾಡಿದರು. ಎಂ ಸ್ಯಾಂಡ್ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರೀಕ್ಷೆ ಮಾಡಿ ಎಂದು ಸೂಚಿಸಿದರಲ್ಲದೆ, ಕಲ್ಲು ಗಣಿಗಾರಿಕೆಯನ್ನು ಕಾನೂನಿನ ವ್ಯಾಪ್ತಿಯಲ್ಲಿ ನಡೆಸಲು ಅನುಮತಿ ನೀಡುವಂತೆ ಕುಮಾರಸ್ವಾಮಿ ತಿಳಿಸಿದರು.

ರಾಜ್ಯದ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಮರಳು, ಕಟ್ಟಡ ಕಲ್ಲು ಹಾಗೂ ಜಲ್ಲಿಯು ಕಡಿಮೆ ದರದಲ್ಲಿ ಸಿಗಲು ಈಗಿರುವ ವ್ಯವಸ್ಥೆ ಹಾಗೂ ಕಾಯ್ದೆ, ನಿಯಮ ಹಾಗೂ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿ ಹೊಸ ನೀತಿಯನ್ನು ರೂಪಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿರುವ ಮರಳು ಮತ್ತು ಕಲ್ಲು ಗಣಿಗಾರಿಕೆ ಕುರಿತ ಕಾಯ್ದೆ ಹಾಗೂ ನಿಯಮಗಳ ಬಗ್ಗೆ ಅಧ್ಯಯನ ಮಾಡಲು ತೆರಳಿರುವ ತಜ್ಞರ ತಂಡವು ವರದಿ ಸಲ್ಲಿಸಿದ ಆಧಾರದ ಮೇಲೆ ರಾಜ್ಯದ ಮರಳು ನೀತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಅಳವಡಿಸಿಕೊಳ್ಳಲು ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಸಹಕಾರ ಇಲಾಖೆ ಸಚಿವ ಬಂಡೆಪ್ಪ ಕಾಶೆಂಪುರ್, ಪಶುಸಂಗೋಪನೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ, ಕಂದಾಯ ಸಚಿವ ಆರ್.ವಿ.ದೇಶಪಾಂಡೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News