ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಎಂಟಿಎಫ್‌ಗೆ ದೂರು

Update: 2018-08-27 15:09 GMT

ಬೆಂಗಳೂರು, ಆ.27: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲಿಟ್ಟ ಕಾಮಗಾರಿಗಳನ್ನು ದುರ್ಬಳಕೆ ಮಾಡಿಕೊಂಡಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಎಂಟಿಎಫ್‌ಗೆ ದೂರು ನೀಡಲಾಗಿದೆ.

ಸೋಮವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್.ಮಹದೇವಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗುತ್ತಿಗೆದಾರರು, ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಮಹದೇವಸ್ವಾಮಿ, ಸರಕಾರಿ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಶೇಕಡ 24.1ರಷ್ಟು ಕಾಮಗಾರಿಗಳನ್ನು ಮೀಸಲಿಡಬೇಕು ಎಂದು ಕಾನೂನು ಇದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಬಿಎಂಟಿಎಫ್ ಎಡಿಜಿಪಿ ಅವರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಮಹಾಲಕ್ಷ್ಮೀಪುರಂನ ಕಾರ್ಯಪಾಲ ಅಭಿಯಂತರ ತಿಮ್ಮರಸು ಎಲ್, 2017-2018ನೇ ಸಾಲಿನಲ್ಲಿ ಸರಕಾರಿ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ-ಪಂಗಡಕ್ಕೆ ಮೀಸಲಿಟ್ಟಿದ್ದ 107.62 ಕೋಟಿ ರೂ.ಮೌಲ್ಯದ ಕಾಮಗಾರಿಗಳನ್ನು ನೇರವಾಗಿ ಕೆಆರ್‌ಐಡಿಎಲ್‌ಗೆ ನೀಡಿದ್ದಾರೆ. ಇದರಿಂದ, ಎಸ್ಸಿ-ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಅನ್ಯಾಯವಾಗಿರುವುದು ಮಾತ್ರವಲ್ಲದೆ, ಅಧಿಕಾರಿಗಳು ನೇರವಾಗಿ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದರು.

ಬಿಬಿಎಂಪಿ ಅಧಿಕಾರಿಗಳ ಅವ್ಯವಹಾರಗಳ ಕುರಿತು ಈಗಾಗಲೇ ಆಯುಕ್ತರ ಗಮನಕ್ಕೆ ತರಲಾಗಿದೆ. ಆದರೂ, ಇದುವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದ ಅವರು, ದಲಿತ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯ ಹಾಗೂ ತಿಮ್ಮರಸು ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ದಲಿತ ಡಿಸಿಎಂ ಇದ್ದರೂ ಅನ್ಯಾಯ..!

ಉಪಮುಖ್ಯಮಂತ್ರಿಯೂ ಆಗಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ದಲಿತ ಸಮುದಾಯಕ್ಕೆ ಸೇರಿದ್ದಾರೆ. ಆದರೆ, ಅವರದೇ ಇಲಾಖೆಯಲ್ಲಿ ನೂರಾರು ಕೋಟಿ ರೂ. ಅವ್ಯವಹಾರ ಮಾತ್ರವಲ್ಲದೆ, ದಲಿತರಿಗೆ ಅನ್ಯಾಯವಾಗಿದೆ. ಈಗಲಾದರೂ, ಈ ಕುರಿತು ತನಿಖೆ ನಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ

-ಎನ್.ಮಹದೇವಸ್ವಾಮಿ, ಅಧ್ಯಕ್ಷ, ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News