ಕುಮಾರಸ್ವಾಮಿ ಸಿಎಂ ಆಗಿದ್ದು ಸಂತಸ ಉಂಟು ಮಾಡಿದೆ: ಮಧು ಬಂಗಾರಪ್ಪ

Update: 2018-08-29 12:25 GMT

ಶಿವಮೊಗ್ಗ, ಆ. 29: 'ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ತಾವು ಪರಾಭವಗೊಂಡಿದ್ದು ಸಹಜವಾಗಿಯೇ ನೋವುಂಟು ಮಾಡಿದೆ. ಆದರೆ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ತಮಗೆ ಅತೀವ ಸಂತಸ ಉಂಟು ಮಾಡಿದೆ' ಎಂದು ಜೆಡಿಎಸ್ ಪಕ್ಷದ ಮುಖಂಡ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಬುಧವಾರ ನಗರದ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 'ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ವಿಧಾನಸಭೆ ಚುನಾವಣೆ ಸೋಲಿನಿಂದ ಪಕ್ಷ ಹೊರ ಬಂದು, ಲೋಕಸಭಾ ಚುನಾವಣೆಯ ತಯಾರಿಯಲ್ಲಿದೆ' ಎಂದರು. 

ತಾವು ಸೋತರು ಸೊರಬ ಕ್ಷೇತ್ರದ ಅಭಿವೃದ್ಧಿ ಕಡೆ ಗಮನ ಹರಿಸಿದ್ದೇನೆ. ಕ್ಷೇತ್ರದ ಅಭಿವೃದ್ದಿ ಯೋಜನೆಗಳಿಗೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೆ ಯತ್ನಿಸುತ್ತೇನೆ. ಕ್ಷೇತ್ರದ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೆನೆ ಎಂದು ತಿಳಿಸಿದರು. 

ಸುಲಭವಲ್ಲ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಅವಶ್ಯವಿದೆ. ಪಕ್ಷದ ವರಿಷ್ಠರು ಈ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ತಾವು ಸ್ಪರ್ಧಿಸುವ ಕುರಿತಂತೆ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. 

ವಿಶ್ವಾಸವಿದೆ: ಒಂದು ವೇಳೆ ಕಾಂಗ್ರೆಸ್ ಜೊತೆ ಹೊಂದಾಣಿಕೆಯಾದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ಪರ್ಧೆಗೆ ಸಿಗುವ ವಿಶ್ವಾಸವಿದೆ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ ಎಂದು ಮಧು ಬಂಗಾರಪ್ಪ ಹೇಳಿದರು. 

ಕಾಗೋಡು ತಿಮ್ಮಪ್ಪನಂತವರು ಪರಾಭವಗೊಂಡಿದ್ದು ನೋವುಂಟು ಮಾಡಿದೆ. ಸುಳ್ಳನ್ನು ಸತ್ಯ ಮಾಡುವುದು ಬಿಜೆಪಿಯವರಿಗೆ ಕರಗತವಾಗಿದೆ. ಅಪಪ್ರಚಾರದ ಮೂಲಕವೇ ಅವರು ರಾಜಕಾರಣ ಮಾಡುತ್ತಿದ್ದಾರೆ. ಈ ಹಿಂದಿನ ಆರ್‍ಎಸ್‍ಎಸ್ ಸಂಘಟನೆಯ ಆಲೋಚನೆಯೇ ಬೇರೆ. ಇಂದಿನ ಆರ್‍ಎಸ್‍ಎಸ್‍ನ ಗುರಿ-ಆಲೋಚನೆಯೇ ಬೇರೆಯಾಗಿದೆ ಎಂದು ಇದೇ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News