ಕಾಲೇಜು ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪರ್ಧೆ
ಬೆಂಗಳೂರು, ಆ. 29: ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಪದವಿ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ಅಂತರ ವಿವಿ ಮತ್ತು ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ವಿಜ್ಞಾನವನ್ನು ಮಾತೃಭಾಷೆಯ ಮೂಲಕ ಜನಸಾಮಾನ್ಯರ ಬಳಿಗೆ ಕೊಂಡೊಯ್ಯವ, ಶೈಕ್ಷಣಿಕ ವಲಯದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡದಲ್ಲಿ ಆಕರ್ಷಕವಾಗಿ ಜನಪ್ರಿಯ ಶೈಲಿಯಲ್ಲಿ ವಿಜ್ಞಾನದ ಸಂವಹನ ಸಾಧ್ಯ ಎಂಬುದನ್ನು ಸಾಬೀತುಗೊಳಿಸಲು ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ತಿಳಿಸಿದ್ದಾರೆ.
ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ಅಡಿಯಲ್ಲಿ ಮೂಲ ವಿಜ್ಞಾನವನ್ನು (ಭೌತಶಾಸ್ತ್ರ, ಜೀವಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ ವಿಷಯಗಳನ್ನು) ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುವ ವಿವಿ ಮಟ್ಟದ ಸ್ಪರ್ಧೆಯಲ್ಲಿ ಭೌತವಿಜ್ಞಾನ, ಜೀವವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಗಣಿತ ಭಾಗಗಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳಂತೆ ಒಟ್ಟು 8 ವಿದ್ಯಾರ್ಥಿಗಳನ್ನು ಒಂದು ವಿಶ್ವವಿದ್ಯಾಲಯದಿಂದ ಆಯ್ಕೆ ಮಾಡಲಾಗುತ್ತದೆ. ಒಟ್ಟು 11 ವಿವಿಗಳಿಂದ 88 ವಿದ್ಯಾರ್ಥಿಗಳು ಅಕ್ಟೋಬರ್ ತಿಂಗಳಿನಲ್ಲಿ ಹೊಸಪೇಟೆಯಲ್ಲಿ ಜರುಗುವ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಸೆಪ್ಟೆಂಬರ್ 8ರೊಳಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೇಂದ್ರ ಕಚೇರಿಗೆ ಸಲ್ಲಿಸಬಹುದಾಗಿದೆ. ಅಂತರ ವಿವಿ ಮಟ್ಟ ಮತ್ತು ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ-080-2267 1839, ಮೊಬೈಲ್‌ಫೋನ್- 94835 49159, 94495 30245, 90084 42557 ಅನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.