ಬರ-ನೆರೆ: ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಬಸವರಾಜ ರಾಯರೆಡ್ಡಿ ಆಗ್ರಹ

Update: 2018-08-29 16:06 GMT

ಬೆಂಗಳೂರು, ಆ. 29: ರಾಜ್ಯದಲ್ಲಿನ ಬರ ಮತ್ತು ಅತಿವೃಷ್ಟಿ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 6,500 ಕೋಟಿ ರೂ.ನೆರವು ಕೋರಿ ಪ್ರಧಾನಿ ಬಳಿಗೆ, ರಾಜ್ಯ ಸರಕಾರ ಸರ್ವಪಕ್ಷ ನಿಯೋಗ ಕೊಂಡೊಯ್ಯಬೇಕೆಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಆಗ್ರಹಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 14ಜಿಲ್ಲೆಗಳ 70 ತಾಲೂಕುಗಳಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಇದೆ. ಇದೇ ವೇಳೆ ಕೊಡಗು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ಮಳೆ-ಪ್ರವಾಹ ಪರಿಸ್ಥಿತಿಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹದಿನಾಲ್ಕನೆ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಆದುದರಿಂದ ಬರ-ನೆರೆ ಪೀಡಿತ ಜಿಲ್ಲೆಗಳ ಅಭಿವೃದ್ಧಿಗೆ ಕೇಂದ್ರ ಸರಕಾರ, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್‌ನಡಿ 6,500 ಕೋಟಿ ರೂ.ನೆರವು ನೀಡಬೇಕು ಎಂದು ಒತ್ತಾಯಿಸಿದರು.

ನಾಲ್ಕು ವರ್ಷಗಳಲ್ಲಿ ಹದಿನಾಲ್ಕನೆ ಹಣಕಾಸು ಆಯೋಗದ ಮೂಲಕ ಕರ್ನಾಟಕಕ್ಕೆ ವಾರ್ಷಿಕ 500 ಕೋಟಿ ರೂ.ನಂತೆ 2 ಸಾವಿರ ಕೋಟಿ ರೂ.ಹಣವನ್ನು ನೀಡಿಲ್ಲ. ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ಹೆಚ್ಚಿನ ನೆರವು ನೀಡುವ ಕೇಂದ್ರ ಸರಕಾರ, ರಾಜ್ಯಕ್ಕೆ ಅತ್ಯಂತ ಕಡಿಮೆ ಹಣ ನೀಡಿ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಯರೆಡ್ಡಿ ಇದೇ ವೇಳೆ ಆರೋಪಿಸಿದರು.

‘ಲೋಕಸಭೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿಯಾಗುವ ಎಲ್ಲ ಅರ್ಹತೆಗಳಿವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಆ ಅವಕಾಶ ಸಿಗುವ ನಿರೀಕ್ಷೆ ಇದೆ. ಈ ಕುರಿತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ’

-ಬಸವರಾಜ ರಾಯರೆಡ್ಡಿ ಮಾಜಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News