ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Update: 2018-08-30 08:35 GMT

ಮಂಗಳೂರು, ಆ.30: ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಲು ಯತ್ನಿಸಿದ ಪ್ರಕರಣವನ್ನು ಖಂಡಿಸಿ ವಿವಿ ವಿದ್ಯಾರ್ಥಿಗಳು ಇಂದು ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ.

 ನಿನ್ನೆ ಸಂಜೆ ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಲು ಯತ್ನಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿಯನಿಯರು ಕೂಡಲೇ ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆದರೆ ಕೃತ್ಯವನ್ನು ವಿವಿ ಆಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಘಟನೆ ನಡೆದು ಒಂದು ದಿನ ಕಳೆದರೂ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಆಡಳಿತ ಕಚೇರಿಯೆದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ಅದರ ಆಧಾರದಲ್ಲಿ ಆರೋಪಿಯ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ವಿದ್ಯಾರ್ಥಿಗಳ ಒತ್ತಾಯವಾಗಿದೆ.

ಈ ಹಿನ್ನೆಲೆಯಲ್ಲಿ ವಿವಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಇದಕ್ಕೊಪ್ಪದ ವಿದ್ಯಾರ್ಥಿಗಳು ಸ್ಥಳಕ್ಕೆ ಕುಲಪತಿ ಆಗಮಿಸಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News