ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ

Update: 2018-08-30 15:30 GMT

ಹೊಸದಿಲ್ಲಿ, ಆ.30: ಗುರುವಾರ ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಿದರು.

ಸಮ್ಮಿಶ್ರ ಸರಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ರಾಹುಲ್‌ಗೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಅವರ ಮುಂದಾಳತ್ವದಲ್ಲಿ ಸಮ್ಮಿಶ್ರ ಸರಕಾರ ಸುರಕ್ಷಿತವಾಗಿದೆ ಎಂದು ತಿಳಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸುವ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷರನ್ನು ಒತ್ತಾಯಿಸಿರುವುದಾಗಿ ತಿಳಿಸಿದರು. ಈಗ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಕಾಂಗ್ರೆಸ್‌ನ 16, ಜೆಡಿಎಸ್‌ನ 10 ಸದಸ್ಯರಿದ್ದಾರೆ. ಜೆಡಿಎಸ್‌ನ ಒಬ್ಬರು ಹಾಗೂ ಕಾಂಗ್ರೆಸ್‌ನ ಮೂವರು ಸಚಿವರ ಸೇರ್ಪಡೆಗೆ ಅವಕಾಶವಿದೆ.

 ತಾನು ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಅವರೊಬ್ಬ ನಾಯಕ. ಮುಖ್ಯಮಂತ್ರಿಯಾಗಬೇಕು ಎಂಬ ಬಯಕೆ ವ್ಯಕ್ತಪಡಿಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಸಮ್ಮಿಶ್ರ ಸರಕಾರ ಸುರಕ್ಷಿತವಾಗಿ ಮುನ್ನಡೆಯಲು ಸಿದ್ಧರಾಮಯ್ಯನರ ಅಗತ್ಯವಿದೆ ಎಂದುತ್ತರಿಸಿದರು.

ಇದೀಗ ಸರಕಾರ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಆಡಳಿತಕ್ಕೆ ಚುರುಕು ಮುಟ್ಟಿಸಿದೆ. ಈಗಾಗಲೇ ಕೃಷಿ ಸಾಲ ಮನ್ನಾ ಮಾಡಲಾಗಿದ್ದು ಬಜೆಟ್ ಪ್ರಸ್ತಾವನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News