ಬೆಂಗಳೂರು: ಪ್ಲಾಸ್ಟಿಕ್ ನಿಷೇಧ ಹಿಂಪಡೆಯಲು ಒತ್ತಾಯಿಸಿ ಧರಣಿ

Update: 2018-08-31 14:09 GMT

ಬೆಂಗಳೂರು, ಆ.31: ಪ್ಲಾಸ್ಟಿಕ್ ಉತ್ಪನ್ನಗಳ ಮೇಲೆ ನಿಷೇಧ ಹೇರಿರುವುದನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರಾಜ್ಯ ಪ್ಲಾಸ್ಟಿಕ್ ಸಂಘ ಸದಸ್ಯರು ನಗರದ ಸ್ವಾತಂತ್ರ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟಿಸಿದರು.

ಹಿಂದಿನ ರಾಜ್ಯ ಸರಕಾರ ಪ್ಲಾಸ್ಟಿಕ್ ನಿಷೇಧ ಆದೇಶವ ತಿದ್ದುಪಡಿಗೊಳಿಸಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಎಂಬುದರ ಬದಲಿಗೆ ಎಲ್ಲ ಬಗೆಯ ಪ್ಲಾಸ್ಟಿಕ್ ಉತ್ಪನ್ನಗಳು ಎಂಬುದಾಗಿ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಬಗೆಯ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಬೀಳಲಿದ್ದು, ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಸಂಘದ ಅಧ್ಯಕ್ಷ ವಿ.ವಿಜಯ್‌ಕುಮಾರ್ ತಿಳಿಸಿದರು.

ಕೇಂದ್ರ ಸರಕಾರದ ಅಧಿಸೂಚನೆಯಂತೆ ಶೇ. 5 ರಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆ ನಿರ್ಮಾಣಕ್ಕೆ ಬಳಸಬಹುದು ಎಂದು ಸೂಚನೆ ನೀಡಿದೆ. ಆದರೆ ಸರಕಾರ ಈ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದಾಗಿ ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆ ತಲೆದೋರುತ್ತಿದೆ ಎಂದು ತಿಳಿಸಿದರು.

ಬಿಬಿಎಂಪಿ ಆದೇಶದಿಂದಾಗಿ ಸುಮಾರು 10ಕ್ಕೂ ಹೆಚ್ಚು ಪ್ಲಾಸ್ಟಿಕ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳ್ಳಲಿವೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಮತ್ತು ಅವರ ಕುಟುಂಬ ಬೀದಿಗೆ ಬೀಳಲಿದೆ. ಜೊತೆಗೆ ಸರಕಾರಕ್ಕೆ ಪಾವತಿಯಾಗುತ್ತಿರುವ 400 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಗೆ ಕಡಿವಾಣ ಬೀಳಲಿದೆ. ಆದ್ದರಿಂದ ತಕ್ಷಣ ಪ್ಲಾಸ್ಟಿಕ್ ನಿಷೇಧ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News