×
Ad

ದಾಸಪ್ಪ ಹೆರಿಗೆ ಆಸ್ಪತ್ರೆ ಮೇಲ್ದರ್ಜೆಗೆ: ಮೇಯರ್ ಸಂಪತ್‌ರಾಜ್

Update: 2018-08-31 19:59 IST

ಬೆಂಗಳೂರು, ಆ.31: ನಗರದ ಟೌನ್‌ಹಾಲ್‌ನಲ್ಲಿರುವ ದಾಸಪ್ಪ ಹೆರಿಗೆ ಆಸ್ಪತ್ರೆಯಿಂದ ನಗರದ ಜನತೆಗೆ ಸಾಕಷ್ಟು ಅನುಕೂಲವಾಗುತ್ತಿದ್ದು, ಇದನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮೇಯರ್ ಸಂಪತ್‌ರಾಜ್ ತಿಳಿಸಿದರು.

ಶುಕ್ರವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ದಾಸಪ್ಪ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗೆ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಿ, ಮೂರು ಅಂತಸ್ತಿನಲ್ಲಿ 50 ಹಾಸಿಗೆಯಿಂದ 250 ಹಾಸಿಗೆವರೆಗೆ ವಿಸ್ತರಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ನಾಲ್ಕನೆ ಅಂತಸ್ತಿನಲ್ಲಿ ವಿವಿಧ ಲ್ಯಾಬ್‌ಗಳನ್ನು ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಜೊತೆ ಚಿರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಅಸಮಾಧಾನ: ಶುಕ್ರವಾರ ಆಸ್ಪತ್ರೆಯ ಕುಂದು ಕೊರತೆಗಳ ವೀಕ್ಷಿಸಿದ ಮೇಯರ್, ಆಸ್ಪತ್ರೆಯ ಆವರಣದಲ್ಲಿ ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದ ಆಸ್ಪತ್ರೆಗೆ ಬರುವವರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಯಲ್ಲಿ ನೀರಿನ ಪೂರೈಕೆಯ ಬಗ್ಗೆ ಪರಿಶೀಲಿಸಿ, ಕೂಡಲೆ ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಬೇಕು. ಆಸ್ಪತ್ರೆಯಲ್ಲಿರುವ ಪ್ಲಾಸ್ಟಿಕ್ ಬ್ಯಾನರ್‌ಗಳನ್ನು ತೆಗೆಯಬೇಕು. ಇನ್ನು ಮುಂದೆ ಆಸ್ಪತ್ರೆಯ ಸುತ್ತಮುತ್ತ ಪ್ಲಾಸ್ಟಿಕ್ ವಸ್ತುಗಳು ಇಲ್ಲದಂತೆ ಎಚ್ಚರಿಕೆ ವಹಿಸಬೇಕು. ಆಸ್ಪತ್ರೆಯನ್ನು ದೇವಾಲಯದಷ್ಟು ಶುಚಿಯಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ಸಿಬ್ಬಂದಿಯ ಕರ್ತವ್ಯವೆಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News