ಬಿಜೆಪಿ ಶಾಸಕರು ಹುಲಿಗಳಿದ್ದಂತೆ: ಶಾಸಕ ಈಶ್ವರಪ್ಪ

Update: 2018-08-31 17:46 GMT

ಶಿವಮೊಗ್ಗ, ಆ. 31: ಬಿಜೆಪಿಯ 104 ಶಾಸಕರು ಹುಲಿಗಳಂತಿದ್ದು, ಒಟ್ಟಾಗಿದ್ದೇವೆ. ನಮ್ಮನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ. ಕಾಂಗ್ರೆಸ್ ಶಾಸಕರ ಬಗ್ಗೆ ಅವರಿಗೆ ನಂಬಿಕೆಯಿಲ್ಲವಾಗಿದೆ. ಈ ಕಾರಣದಿಂದ ಬಿಜೆಪಿಯ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. 

ಬಿಜೆಪಿ ಪಕ್ಷದ ನಾಯಕರು ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ರವರು ಮಾಡಿದ್ದ ಆರೋಪಕ್ಕೆ ಕೆ.ಎಸ್.ಈಶ್ವರಪ್ಪ ಮೇಲಿನ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ, ನಗರದ ಗುಂಡಪ್ಪಶೆಡ್‍ನ ಶಾರದಾ ದೇವಿ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 

ಸಮನ್ವಯತೆ ಇಲ್ಲ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಸಮನ್ವಯತೆ ಇಲ್ಲದಾಗಿದೆ. ಒಬ್ಬರು ಮತ್ತೊಬ್ಬರ ಮುಖ ನೋಡದ ಪರಿಸ್ಥಿತಿಗೆ ಬಂದಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನಳಲ್ಲಿ ಎರಡು ಬಾರಿ ಮಾತ್ರ ಸಮನ್ವಯ ಸಮಿತಿ ಸಭೆ ನಡೆದಿದೆ. ಇದೆಲ್ಲವನ್ನು ಗಮನಿಸಿದರೆ ಈ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲವಾಗಿದೆ ಎಂದರು. 

ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ನಡೆಸುತ್ತಿದೆ ಎಂದು ಬಿ.ಎಸ್.ಯಡ್ಡಿಯೂರಪ್ಪ ಮಾಡಿರುವ ಆರೋಪ ಅತ್ಯಂತ ಗಂಭೀರವಾದುದಾಗಿದೆ. ಈ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಕೇಂದ್ರ ಸರ್ಕಾರದಿಂದ ಬೇಕಿದ್ದರೆ ತನಿಖೆ ನಡೆಸಲಿ ಎಂದು ಲಘು ದಾಟಿಯಲ್ಲಿ ಪ್ರತಿಕ್ರಿಯೆ ನೀಡಿರುವುದು ಸರಿಯಲ್ಲ. ಈ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಯಬೇಕಾಗಿದೆ. ಪ್ರತ್ಯೇಕ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ. 

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಹಾಗೆಯೇ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಆಡಳಿತ ನಡೆಸಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News