ಸಾಮರಸ್ಯ ಹದಗೆಡಿಸುತ್ತಿರುವ ಕೇಂದ್ರ ಸರಕಾರ: ಮಲ್ಲಿಕಾರ್ಜುನ ಖರ್ಗೆ

Update: 2018-09-01 13:55 GMT

ಹುಬ್ಬಳ್ಳಿ, ಸೆ.1: ಕೇಂದ್ರದ ಬಿಜೆಪಿ ಸರಕಾರ ದೇಶದ ಆರ್ಥಿಕತೆಯನ್ನು ಹಾಳು ಮಾಡುತ್ತಿರುವುದಲ್ಲದೆ, ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದೆ’ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

ಶನಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರವೇ ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ ಯುಪಿಎ ಸರಕಾರದ ಅವಧಿಯ ರಾಷ್ಟ್ರಿಯ ಉತ್ಪನ್ನದ ಬೆಳವಣಿಗೆ ದರ(ಜಿಡಿಪಿ) ಶೇ.8.2ರಷ್ಟಿತ್ತು. ಆದರೆ, ಬಿಜೆಪಿ ಸರಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಜಿಡಿಪಿ ಶೇ.7.3ರಷ್ಟಿದೆ. ಗರಿಷ್ಟ ಮೊತ್ತದ ನೋಟು ಅಮಾನ್ಯ ಮಾಡುವ ಮೂಲಕ ಆರ್ಥಿಕತೆಯನ್ನು ಹಾಳು ಮಾಡಿದ್ದ ಸರಕಾರ ಇದೀಗ ಸಾಮಾಜಿಕ ಸಾಮರಸ್ಯವನ್ನು ಕದಡುತ್ತಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಟೀಕಿಸಿದರು.

ರೂಪಾಯಿ ಮೌಲ್ಯ ಕುಸಿತ: ಕೇಂದ್ರ ಸರಕಾರದ ತಪ್ಪು ಆರ್ಥಿಕ ನೀತಿ ಪರಿಣಾಮ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕುಸಿತ ಕಂಡಿದೆ. ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಾಗುತ್ತಲೇ ಇದೆ ಎಂದು ವಾಗ್ದಾಳಿ ನಡೆಸಿದರು. ಇಂಧನ ಬೆಲೆ ಹೆಚ್ಚಾಗಿರುವುದರಿಂದ ಎಕ್ಸೈಸ್ ಡ್ಯೂಟಿಯಿಂದಲೇ ಕೇಂದ್ರದ ಬೊಕ್ಕಸಕ್ಕೆ ಪ್ರತಿವರ್ಷ 1.67ಲಕ್ಷ ಕೋಟಿ ರೂ.ಆದಾಯ ಸಂದಾಯವಾಗುತ್ತಿದೆ. ಅದನ್ನೂ ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ದೂರಿದರು.

ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಿ ಮೋದಿ, ನಾಲ್ಕೂವರೆ ವರ್ಷ ಕಳೆದರೂ 75ಲಕ್ಷ ಉದ್ಯೋಗವನ್ನು ಮಾತ್ರ ಸೃಷಿಸಿದ್ದಾರೆ. ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಂಡಿಲ್ಲ. ಉದ್ಯೋಗ ಇಲ್ಲದಿದ್ದರೆ ಕೊಳ್ಳುವ ಶಕ್ತಿ ಇರುವುದಿಲ್ಲ, ಅದು ಮತ್ತೆ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದು ಅವರು ಎಚ್ಚರಿಸಿದರು.

‘ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತ ವೈಫಲ್ಯದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷದಿಂದ ಜನಸಂಘರ್ಷ ಯಾತ್ರೆಯನ್ನು ದೇಶದ ಆರು ಕಡೆ ಹಮ್ಮಿಕೊಳ್ಳಲಾಗುವುದು’

-ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News