ಮಂಡ್ಯ: ಸೂಕ್ತ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳಿಂದ ಧರಣಿ

Update: 2018-09-01 17:30 GMT

ಮಂಡ್ಯ, ಸೆ.1: ಬಸ್ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ನೂರಾರು ವಿದ್ಯಾರ್ಥಿಗಳು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ತವರು ಮದ್ದೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಿಲ್ದಾಣದ ಎದುರು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸಾರಿಗೆ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಲಾ ಕಾಲೇಜು ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸರಿಯಾಗಿ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡರು. ಹೆದ್ದಾರಿಯಲ್ಲಿ ಸಂಚರಿಸುವ ಹಲವು ಬಸ್‍ಗಳು ನಿಲ್ದಾಣಕ್ಕೆ ಬಾರದೆ ಹೆದ್ದಾರಿಯಲ್ಲೇ ಚಲಿಸುತ್ತವೆ. ಕೆಲವು ಕಂಡಕ್ಟರ್‍ಗಳು ಪಾಸ್ ಮಾನ್ಯ ಮಾಡದೆ ತೊಂದರೆ ನೀಡುತ್ತಾರೆ ಎಂದು ಅವರು ಆರೋಪಿಸಿದರು.

ಸೂಕ್ತ ಬಸ್ ವ್ಯವಸ್ಥೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ವಹಿಸಿಲ್ಲ. ಸಮರ್ಪಕವಾಗಿ ಬಸ್‍ಪಾಸ್ ವಿರತಣೆಯೂ ಆಗಿಲ್ಲ. ಸಚಿವರು ಈ ಬಗ್ಗೆ ಗಮನಹರಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News