ನಗರ ಸ್ಥಳೀಯ ಸಂಸ್ಥೆ ಚುನಾವಣೆ: ನಾಳೆ ಮತ ಎಣಿಕೆ

Update: 2018-09-02 16:10 GMT

ಬೆಂಗಳೂರು, ಸೆ. 2: ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆ, ನಗರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಆ.31ರಂದು ಚುನಾವಣೆಯ ಮತ ಏಣಿಕೆ ಕಾರ್ಯ ನಾಳೆ(ಸೆ.3)ಬೆಳಗ್ಗೆ 8ಗಂಟೆಯಿಂದ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.

ಮೂರು ಮಹಾನಗರ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಸೇರಿದಂತೆ ಒಟ್ಟು 102 ನಗರ ಸ್ಥಳೀಯ ಸಂಸ್ಥೆಗಳಿಗೆ ಆ.31ರಂದು ಚುನಾವಣೆ ನಡೆದಿದ್ದು, ನಾಳೆ ಬೆಳಗ್ಗೆಯಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ಆಯೋಗ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

ಒಟ್ಟು 2634 ವಾರ್ಡ್‌ಗಳಿಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಪಕ್ಷೇತರರು ಸೇರಿದಂತೆ 9121 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಾಳೆ ಗೊತ್ತಾಗಲಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಮೂರು ಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಲಿದೆ.

ರಾಜ್ಯದಲ್ಲಿ ಮೈತ್ರಿ ಸರಕಾರ ಆಡಳಿತವಿದ್ದರೂ, ಕಾಂಗ್ರೆಸ್-ಜೆಡಿಎಸ್ ಸೌಹಾರ್ದ ಹೋರಾಟ ನಡೆಸಿದ್ದು, ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಘೋಷಣೆ ಮಾಡಿವೆ. ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉತ್ಸಾಹದಲ್ಲಿದೆ. ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಸೋಲು-ಗೆಲುವಿನ ಲೆಕ್ಕಾಚಾರ ಆರಂಭಗೊಂಡಿದೆ. ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮೂರು ಪಟ್ಟಣ ಪಂಚಾಯತ್ ನ 42 ವಾರ್ಡ್‌ಗಳ ಚುನಾವಣೆಯನ್ನು ಮುಂದೂಡಲಾಗಿದೆ. ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ವಾರ್ಡ್-ನಂ.19ರ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಚುನಾವಣೆ ನಡೆದಿಲ್ಲ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪುರಸಭೆ ವಾರ್ಡ್-ನಂ.9ರ ಬಿಎಸ್‌ಪಿ ಅಭ್ಯರ್ಥಿ ನಿಧನದಿಂದ ಚುನಾವಣೆ ರದ್ದಾಗಿತ್ತು. ಇನ್ನುಳಿದಂತೆ ನಡೆದಿರುವ ಎಲ್ಲ ವಾರ್ಡ್‌ಗಳ ಮತ ಎಣಿಕೆ ನಾಳೆ ಬೆಳಗ್ಗೆ 8ಗಂಟೆಗೆ ಪ್ರಾರಂಭವಾಗಲಿದ್ದು, ವಿದ್ಯುನ್ಮಾನ ಮತಯಂತ್ರ ಬಳಕೆಯಾಗಿರುವುದರಿಂದ ನಾಳೆ ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News