ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೇಲುಗೈ: ದಿನೇಶ್‌ ಗುಂಡೂರಾವ್

Update: 2018-09-03 14:32 GMT

ಬೆಂಗಳೂರು, ಸೆ.3: ಮೈಸೂರು, ತುಮಕೂರು, ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯಾದ್ಯಂತ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಇರುವ ಸ್ಥಳೀಯ ಸಂಸ್ಥೆಗಳ ಮತದಾರರು ಈಗಲೂ ಕಾಂಗ್ರೆಸ್ ಮೇಲೆ ಹೆಚ್ಚಿನ ವಿಶ್ವಾಸವನ್ನು ಇಟ್ಟಿದ್ದಾರೆ ಎಂಬುದು ಈ ಫಲಿತಾಂಶದಿಂದ ಸಾಬೀತಾಗಿದೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ನಾವು ಎರಡನೆ ಸ್ಥಾನ ಪಡೆದಿದ್ದೆವು. ಸಮ್ಮಿಶ್ರ ಸರಕಾರ ರಚನೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ, ಈ ಚುನಾವಣೆಯಲ್ಲಿ ದೊಡ್ಡ ಆಘಾತವಾಗಲಿದೆ ಎಂದು ಕೆಲವರು ಹೇಳುತ್ತಿದ್ದರು. ಆದರೆ, ಈಗ ಚುನಾವಣೆ ನಡೆದಿರುವ 2662 ವಾರ್ಡುಗಳ ಪೈಕಿ ಕಾಂಗ್ರೆಸ್ 982 ಸ್ಥಾನಗಳನ್ನು ಗೆಲ್ಲುವ ಮೂಲಕ ಶೇ.38ರಷ್ಟು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ ಎಂದು ಅವರು ಹೇಳಿದರು.

ಬಿಜೆಪಿ 929, ಜೆಡಿಎಸ್ 375 ಹಾಗೂ ಪಕ್ಷೇತರರು 378 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಸೇರಿದಂತೆ ಕೆಲವೆಡೆ ಪಕ್ಷದ ಚಿನ್ಹೆಯಿಲ್ಲದೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅವರ ಲೆಕ್ಕ ತೆಗೆದುಕೊಂಡರೆ ಕಾಂಗ್ರೆಸ್ ವಿಜೇತ ಅಭ್ಯರ್ಥಿಗಳ ಸಂಖ್ಯೆ ಒಂದು ಸಾವಿರ ಗಡಿ ದಾಟಬಹುದು ಎಂದು ದಿನೇಶ್‌ ಗುಂಡೂರಾವ್ ತಿಳಿಸಿದರು. ಮೈಸೂರು, ತುಮಕೂರು ಮಹಾನಗರ ಪಾಲಿಕೆ ಸೇರಿದಂತೆ ಕೆಲವು ಸ್ಥಳೀಯ ಸಂಸ್ಥೆಗಳಲ್ಲಿ ಯಾರಿಗೂ ಬಹುಮತ ಸಿಕ್ಕಿಲ್ಲ. ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೆ ಜೆಡಿಎಸ್ ವರಿಷ್ಠ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಎರಡು ಪಕ್ಷಗಳು ಸೇರಿ ಸುಮಾರು 15 ಕಡೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯಬಹುದು ಎಂದು ದಿನೇಶ್‌ ಗುಂಡೂರಾವ್ ತಿಳಿಸಿದರು.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಕಾಂಗ್ರೆಸ್ ಪರವಾಗಿ ಉತ್ತಮ ಫಲಿತಾಂಶ ಬಂದಿದೆ. ಮೈತ್ರಿ ಅಗತ್ಯವಿರುವ ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದೇವೆ. ಬೆಳಗಾವಿ, ಗೋಕಾಕ್, ಖಾನಾಪುರ, ಸದಲಗಾದಲ್ಲಿ ಮೊದಲಿನಿಂದಲೂ ಚಿನ್ಹೆ ರಹಿತವಾಗಿ ಚುನಾವಣೆ ನಡೆದುಕೊಂಡು ಬಂದಿದೆ. ಎಲ್ಲ ಪಕ್ಷಗಳು ಅಲ್ಲಿ ಪಕ್ಷೇತರರನ್ನೆ ಕಣಕ್ಕಿಳಿಸುವುದು. ಬೆಳಗಾವಿ ಚುನಾವಣಾ ರಾಜಕೀಯವೇ ಬೇರೆ ಎಂದು ದಿನೇಶ್‌ ಗುಂಡೂರಾವ್ ತಿಳಿಸಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಬಿಜೆಪಿ ಧೂಳೀಪಟವಾಗುತ್ತಿತ್ತು. ಈ ಚುನಾವಣೆಯ ಪ್ರಚಾರದಲ್ಲಿ ಎರಡು ಪಕ್ಷಗಳು ಎಲ್ಲಿಯೂ ಸರಕಾರಕ್ಕೆ ಮುಜುಗರವಾಗದಂತೆ, ಮೈತ್ರಿ ಧರ್ಮ ಪಾಲಿಸಿಕೊಂಡು ಪ್ರಚಾರ ಮಾಡಿದ್ದೇವೆ ಎಂದು ದಿನೇಶ್‌ ಗುಂಡೂರಾವ್ ಹೇಳಿದರು.

ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಸ್ಪರ್ಧೆಯಿದ್ದ ಕ್ಷೇತ್ರದಲ್ಲಿಯೂ ನಾವು ಸಹನೆಯಿಂದ ಚುನಾವಣೆ ಎದುರಿಸಿದ್ದೇವೆ. ಈ ಚುನಾವಣಾ ಫಲಿತಾಂಶವು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಶಕ್ತಿ ನೀಡಿದ್ದು, ಲೋಕಸಭಾ ಚುನಾವಣೆಗೆ ಮತ್ತಷ್ಟು ಹುರುಪಿನಿಂದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಂತೆ ಆಗಿದೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿದೇಶ ಪ್ರವಾಸ ಕೈಗೊಂಡಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯರಿಗೆ ಕೆಲಕಾಲ ಬಿಡುವು ಬೇಕಿತ್ತು ಅನ್ನಿಸುತ್ತೆ. ಹಾಗಾಗಿ, ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಇದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ. ಅವರು ತಮ್ಮ ಪುತ್ರಹಾಗೂ ಕೆಲ ಆಪ್ತರ ಜೊತೆ ಪ್ರವಾಸ ಹೊರಟಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಕಾಂಗ್ರೆಸ್ ಪರ ಫಲಿತಾಂಶ ಉತ್ತಮ ರೀತಿಯಲ್ಲಿ ಬಂದಿದೆ. ಈ ಸಲ ಕಾಂಗ್ರೆಸ್ ಶೇ.41ರಷ್ಟು ಫಲಿತಾಂಶಗಳಿಸಿದೆ. ಇದು ಕಳೆದ ಬಾರಿಯ ಫಲಿತಾಂಶಕ್ಕಿಂತ ಹೆಚ್ಚು. ಈ ಫಲಿತಾಂಶದಿಂದ ಬಿಜೆಪಿಯ ಭ್ರಮೆ ಕಳಚಿದೆ. ಕೇಂದ್ರದ ಬಿಜೆಪಿ ಸರಕಾರದ ವೈಫಲ್ಯಗಳೇ ಅವರಿಗೆ ಮುಳುವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಇ.ರಾಧಾಕೃಷ್ಣ, ಪ್ರಧಾನಕಾರ್ಯದರ್ಶಿ ಶಫಿ ಉಲ್ಲಾ, ಖಜಾಂಚಿ ಕೃಷ್ಣಂ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News