ನಬಾರ್ಡ್ ನೆರವಿನಿಂದ ಶಾಲೆ-ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ: ಕುಮಾರಸ್ವಾಮಿ

Update: 2018-09-03 14:49 GMT

ಬೆಂಗಳೂರು, ಸೆ. 3: ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿ ಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ನೆರವಿನಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಒಟ್ಟು 502 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣಕ್ಕಾಗಿ 300 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ರಾಜ್ಯದ 233 ಸರಕಾರಿ ಪ್ರೌಢಶಾಲೆಗಳನ್ನು ನೆಲಸಮಗೊಳಿಸಿ ಮರುನಿರ್ಮಾಣಕ್ಕೆ 7890.75 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಇಲಾಖೆ ವತಿಯಿಂದ ಸಲ್ಲಿಸಲಾಗಿದ್ದು, ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ಇದೇ ವೇಳೆ ಸೂಚಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ 150 ಕೋಟಿ ರೂ.ಗಳ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ತ್ವರಿತವಾಗಿ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 2018-19ನೆ ಸಾಲಿನ ಆಯವ್ಯಯದಲ್ಲಿ ನಬಾರ್ಡ್ ಕಾಮಗಾರಿಗಳಿಗೆ 5.76 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದ್ದು, ಅವಶ್ಯವಿರುವ 39.42 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು. ಕಾಲೇಜು ಶಿಕ್ಷಣ ಇಲಾಖೆಯಲ್ಲಿ 395 ಪ್ರಾಂಶುಪಾಲರನ್ನು ನೇಮಕ ಮಾಡಿಕೊಳ್ಳಬೇಕಿದ್ದು, 480 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಒಟ್ಟಾರೆ 3 ಸಾವಿರ ಹುದ್ದೆಗಳ ಸೃಜನೆ ಆಗಬೇಕಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್.ಮಂಜುಳಾ ಸಭೆಯ ಗಮನಕ್ಕೆ ತಂದರು.

ಈ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಸಿಎಂ ಸೂಚಿಸಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News