ಆರೋಗ್ಯ ಕರ್ನಾಟಕ-ಆಯುಷ್ಮಾನ್ ಭಾರತ್ ವಿಲೀನ ಕುರಿತು ವೈದ್ಯರೊಂದಿಗೆ ಚರ್ಚಿಸಿ ತೀರ್ಮಾನ: ಕುಮಾರಸ್ವಾಮಿ
Update: 2018-09-04 19:59 IST
ಬೆಂಗಳೂರು, ಸೆ.4: ಬಡವರಿಗೆ ನಗದು ರಹಿತ ಆರೋಗ್ಯ ಸೇವೆ ನೀಡುವ ರಾಜ್ಯ ಸರಕಾರದ ಆರೋಗ್ಯ ಕರ್ನಾಟಕ ಮತ್ತು ಆಯುಷ್ಮಾನ್ ಭಾರತ್ ಯೋಜನೆಗಳನ್ನು ವಿಲೀನಗೊಳಿಸುವ ನಿಟ್ಟಿನಲ್ಲಿ ವೈದ್ಯರೊಂದಿಗೆ ಸಮಾಲೋಚಿಸಿ ನಂತರ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಈ ಎರಡೂ ಯೋಜನೆಗಳ ಸಾಧಕ ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆರ್ಥಿಕ ಇಲಾಖೆ ಮತ್ತಿತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.