ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ದಿನೇಶ್ ಗುಂಡೂರಾವ್

Update: 2018-09-05 15:07 GMT

ಹುಬ್ಬಳ್ಳಿ, ಸೆ. 5: ಈ ತಿಂಗಳ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಲಿದ್ದೇವೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಅಭಯ ನೀಡಿದ್ದಾರೆ.

ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಉಳಿದ ಆರು ಸ್ಥಾನಗಳನ್ನು ಭರ್ತಿ ಮಾಡಲು ಈಗಾಗಲೇ ತೀರ್ಮಾನಿಸಿದ್ದು, ಉತ್ತರ ಕರ್ನಾಟಕ ಭಾಗದ ಮುಖಂಡರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗುವುದು ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ. ಸಚಿವ ರಮೇಶ್ ಜಾರಕಿಹೊಳಿ ಮಾತನಾಡುವ ಶೈಲಿ ಹಾಗೇ ಎಂದು ಸಮರ್ಥಿಸಿದ ದಿನೇಶ್ ಗುಂಡೂರಾವ್, ಬೆಳಗಾವಿ ಜಿಲ್ಲೆಯ ಮುಖಂಡರ ಮಧ್ಯೆ ಯಾವುದೇ ಒಳಜಗಳವಿಲ್ಲ ಎಂದು ಸ್ಪಷ್ಟಪಡಿಸಿದರು.

ರಫೇಲ್ ಯುದ್ದ ವಿಮಾನ ಖರೀದಿ ಹಗರಣದಲ್ಲಿ ಪ್ರಧಾನಿ ಮೋದಿ ನೇರವಾಗಿ ಭಾಗಿಯಾಗಿದ್ದು, ಆ ಡೀಲ್‌ನಲ್ಲಿ ಕೋಟ್ಯಂತರ ರೂ.ಅವ್ಯವಹಾರ ನಡೆದಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಅವರು ಇದೇ ವೇಳೆ ಎಚ್ಚರಿಸಿದರು.

ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದರೂ, ಪೆಟ್ರೋಲ್, ಡಿಸೇಲ್ ಬೆಲೆ ಏರಿತ್ತಲೇ ಇದೆ. ಮತ್ತೊಂದು ಕಡೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ವಿತ್ತ ಸಚಿವ ಅರುಣ್ ಜೆಟ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ದೇಶದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದ್ದು, ಇದಕ್ಕೆ ಪ್ರಧಾನಿ ಮೋದಿ ನೇರ ಕಾರಣ ಎಂದು ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News