ಶಿಕ್ಷಕರ ಸಮಸ್ಯೆ ಪರಿಹರಿಸಲು ಎಲ್ಲಾ ನೆರವು: ಶಾಸಕ ಕೆ.ಎಸ್.ಈಶ್ವರಪ್ಪ

Update: 2018-09-05 17:25 GMT

ಶಿವಮೊಗ್ಗ, ಸೆ. 5: ಶಿಕ್ಷಣ ರಂಗ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಪರಿಹರಿಸಲು ಎಲ್ಲಾ ನೆರವು ನೀಡಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಬುಧವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಹಲವಾರು ಸರ್ಕಾರಿ ಶಾಲಾ ಕಟ್ಟಡಗಳು ದುರಸ್ತಿಯಾಗಬೇಕಿವೆ. ಶಿವಮೊಗ್ಗ ನಗರದಲ್ಲಿರುವ ಅಂತಹ ಶಾಲೆಗಳನ್ನು ಗುರುತಿಸಿ ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಲು ಎಲ್ಲಾ ರೀತಿಯ ನೆರವು ನೀಡಲಾಗುವುದು. ಶಿಕ್ಷಕರ ಭವನ ನಿರ್ಮಾಣದ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು. ಇದಕ್ಕಾಗಿ ಜಾಗ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಶಿಕ್ಷಕರ ಸಮಸ್ಯೆಯನ್ನು ಸೃಷ್ಟಿಸಿ ಗೊಂದಲ ಉಂಟು ಮಾಡಲಾಗುತ್ತಿದೆ. ಹೆಚ್ಚುವರಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಿ ಶಿಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಅವರು ಮಾತನಾಡಿ, ಶಿಕ್ಷಕರು ಪರಿವರ್ತನೆಯ ಹರಿಕಾರರು. ಆದರೆ ಸರ್ಕಾರಿ ಶಾಲೆಗಳಲ್ಲಿ ಅವರಿಗೆ ನೂರಾರು ಜವಾಬ್ದಾರಿಯನ್ನು ಹೊರಿಸಿರುವುದರಿಂದ ಸರಿಯಾಗಿ ಪಾಠದ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದು, ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ನೀಡಬೇಕು. ಶಿಕ್ಷಕರು ಸಹ ತಮ್ಮ ಗುಣಮಟ್ಟವನ್ನು ಉತ್ತಮಪಡಿಸಿಕೊಳ್ಳುವ ಅಗತ್ಯವಿದೆ. ಶಿಕ್ಷಕರ ಮೇಲೆ ಹಲ್ಲೆ ಪ್ರಕರಣಗಳನ್ನು ತಪ್ಪಿಸಲು ಸೂಕ್ತ ಕಾಯ್ದೆಯನ್ನು ರೂಪಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಿವೃತ್ತ ಪ್ರಾಂಶುಪಾಲ ಎಚ್.ಬಿ.ಪಂಚಾಕ್ಷರಯ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸುಮಂಗಳಾ ಕುಚಿನಾಡ ಅವರು ಸ್ವಾಗತಿಸಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮೇಯರ್ ನಾಗರಾಜ ಕಂಕಾರಿ, ಉಪ ಮೇಯರ್ ವಿಜಯಲಕ್ಷ್ಮಿ ಪಾಟೀಲ್, ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News