ಲೋಕಸಭಾ ಚುನಾವಣೆ : ದ.ಕ. ದಲ್ಲಿ ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಟಿಕೆಟ್ ನೀಡಲು ಆಗ್ರಹ

Update: 2018-09-07 06:49 GMT

ಮಂಗಳೂರು, ಸೆ.6: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ದ.ಕ. ಲೋಕಸಭೆ ಕ್ಷೇತ್ರಕ್ಕೆ ಮುಸ್ಲಿಮರಿಗೆ ಟಿಕೆಟ್ ನೀಡಲು ದ.ಕ. ಮತ್ತು ಉಡುಪಿ ಜಿಲ್ಲಾ ಸೆಂಟ್ರಲ್ ಕಮಿಟಿ ಆಗ್ರಹಿಸಿದೆ.

ಸಂಸ್ಥೆಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್‌ ಅಧ್ಯಕ್ಷತೆಯಲ್ಲಿ ನಗರದ ಬಂದರ್‌ನಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

2019ರಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ದ.ಕ. ಲೋಕಸಭಾ ಕ್ಷೇತ್ರಕ್ಕೆ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್‌ಕುಮಾರ್ ಅವರಿಗೆ ಮನವಿ ನೀಡಲು ನಿರ್ಧರಿಸಲಾಯಿತು ಎಂದು ಪ್ರಕಟನೆ ತಿಳಿಸಿದೆ.

ಹಾಗೆಯೇ ಮುಂದಿನ ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಗಳಲ್ಲಿ ಕೂಡ ಮುಸ್ಲಿಂ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ರಾಜ್ಯದಲ್ಲಿ ದ.ಕ. ಜಿಲ್ಲೆಯು ಅತ್ಯಂತ ಹೆಚ್ಚಿನ ಮುಸ್ಲಿಮ್ ಸಮುದಾಯದ ಮತದಾರರನ್ನು ಹೊಂದಿದೆ. ಅಲ್ಲದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ.90ಕ್ಕಿಂತಲೂ ಹೆಚ್ಚು ಮುಸ್ಲಿಮ್ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಮುಸ್ಲಿಮ್ ಸಮುದಾಯಕ್ಕೆ ಅವಕಾಶ ನೀಡುವುದು ಸೂಕ್ತವಾಗಿದೆ.

ಸಭೆಯಲ್ಲಿ ಕಮಿಟಿಯ ಉಪಾಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ.ಅಶ್ರಫ್, ಹಾಜಿ ಬಾಷಾ ತಂಙಳ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News