ಜಗದೀಶ್ ಶೆಟ್ಟರ್, ತನ್ವೀರ್ ಸೇಠ್‌ಗೆ ಹೈಕೋರ್ಟ್ ನೋಟಿಸ್

Update: 2018-09-07 17:01 GMT
ಜಗದೀಶ್ ಶೆಟ್ಟರ್, ತನ್ವೀರ್ ಸೇಠ್‌

ಬೆಂಗಳೂರು, ಸೆ.7: ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳಿಗೆ ಸಂಬಂಧಿಸಿದಂತೆ ಶಾಸಕರಾದ ಜಗದೀಶ್ ಶೆಟ್ಟರ್ ಹಾಗೂ ತನ್ವೀರ್ ಸೇಠ್‌ಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.

ಮೈಸೂರಿನ ನರಸಿಂಹರಾಜ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಬ್ದುಲ್ ಮಜೀದ್ ಹಾಗೂ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಪರಾಜಿತ ಮಹೇಶ್ ನಲ್ವಾಡ್ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರಿದ್ದ ಪೀಠ, ಜಗದೀಶ್ ಶೆಟ್ಟರ್, ತನ್ವೀರ್ ಸೇಠ್ ಸೇರಿ ಚನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಅವರು ಗಳಿಸಿರುವ ಮತಗಳಲ್ಲಿ ವ್ಯತ್ಯಾಸವಿದೆ. ಇವಿಎಂ ಹಾಗೂ ವಿವಿಪ್ಯಾಟ್‌ಗಳಲ್ಲಿರುವ ಮತಗಳು ತಾಳೆಯಾಗಿಲ್ಲ. ಹೀಗಾಗಿ ಮರು ಮತ ಎಣಿಕೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮಹೇಶ್ ನಲ್ವಾಡ್ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ಮೈಸೂರಿನ ನರಸಿಂಹರಾಜ ಕ್ಷೇತ್ರದ ಚುನಾವಣೆಯಲ್ಲೂ ಇವಿಎಂ ಹಾಗೂ ವಿವಿಪ್ಯಾಟ್‌ಗಳ ದುರ್ಬಳಕೆಯಾಗಿದ್ದು, ತನ್ವೀರ್ ಸೇಠ್ ಅವರ ಶಾಸಕತ್ವ ಅಸಿಂಧುಗೊಳಿಸಬೇಕು ಎಂದು ಅಬ್ದುಲ್ ಮಜೀದ್ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News