​11ರಿಂದ ಎರಡನೇ ಸುತ್ತಿನ ಇಂದ್ರಧನುಷ್: ಉಡುಪಿ ಜಿಲ್ಲಾಧಿಕಾರಿ

Update: 2018-09-07 18:18 GMT

ಉಡುಪಿ, ಸೆ.7: ಜಿಲ್ಲೆಯಲ್ಲಿ ಸೆ.11ರಿಂದ 17ರವರೆಗೆ 2ನೇ ಸುತ್ತಿನ ಇಂದ್ರಧನುಷ್ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಆ.13ರಿಂದ 20ರ ವರೆಗೆ ನಡೆದ ಮೊದಲ ಸುತ್ತಿನ ಇಂದ್ರಧನುಷ್ ಕಾರ್ಯಕ್ರಮದಲ್ಲಿ 0-2 ವರ್ಷದೊಳಗಿನ 3226 ಮಕ್ಕಳಿಗೆ ಲಸಿಕೆ ನೀಡಿ ಶೇ.98.87 ಸಾಧನೆ ಮಾಡಲಾಗಿದೆ. 800 ಗರ್ಭಿಣಿಯರಿಗೆ ಲಸಿಕೆ ನೀಡಿ ಶೇ.99.88 ಸಾಧನೆ ಮಾಡಲಾಗಿದೆ. ಎರಡನೇ ಸುತ್ತಿನಲ್ಲಿ 2033 ಮಕ್ಕಳಿಗೆ ಮತ್ತು 419 ಗರ್ಭಿಣಿ ಯರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಮತ್ತು ಕಟ್ಟಡ ನಿರ್ಮಾಣ ಪ್ರದೇಶ ಹಾಗೂ ವಲಸೆ ಕಾರ್ಮಿಕರು ಇರುವ ಕಡೆ ಹೆಚ್ಚಿನ ಗಮನ ಹರಿಸಿ ಲಸಿಕೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ನಗರಸಭೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸೂಕ್ರ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು.
ಕಾರ್ಮಿಕ ಇಲಾಖೆ ಅಧಿಕಾರಿಗಳು ವಲಸೆ ಕಾರ್ಮಿಕರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಇಂದ್ರಧನುಷ್ ಲಸಿಕೆ ನೀಡುವ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ಜಿಲ್ಲೆಯ ಎಲ್ಲಾ 158 ಗ್ರಾಪಂಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರು.

ಎರಡನೇ ಸುತ್ತಿನಲ್ಲಿ ನಡೆಯುವ ಇಂದ್ರ ಧನುಷ್ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಹಾಗೂ ಸಂಘ ಸಂಸ್ಥೆಗಳು ಅಗತ್ಯ ನೆರವು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಆರ್‌ಸಿಎಚ್ ಅಧಿಕಾರಿ ಡಾ.ಎಂ.ಜಿ.ರಾಮ ಹಾಗೂ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News