ಬಿಜೆಪಿಯಿಂದ ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ: ಕುಮಾರಸ್ವಾಮಿ ಆರೋಪ

Update: 2018-09-08 12:24 GMT

ಬೆಂಗಳೂರು, ಸೆ.8: ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಹೃದಯ ಮತ್ತು ಎದೆಗೂಡಿನ ಶಸ್ತ್ರಚಿಕಿತ್ಸಕರ ಸಂಘದ ಮೂರನೆ ವಾರ್ಷಿಕ ಸಮ್ಮೇಳನದ ಬಳಿಕ ಮಾತನಾಡಿದ ಅವರು, ಬಿಜೆಪಿ ನಾಯಕರು ಸಮ್ಮಿಶ್ರ ಸರಕಾರವನ್ನು ಹೇಗೆ ಕೆಡವುತ್ತಾರೆ ಎಂಬುದನ್ನು ನೋಡಿಯೇ ಬಿಡುತ್ತೇನೆ ಎಂದು ಸವಾಲು ಹಾಕಿದರು.

ಸಮ್ಮಿಶ್ರ ಸರಕಾರದ ಕೆಲವು ಸಚಿವರು ಹಾಗೂ ಕೆಲ ನಾಯಕರ ವಿರುದ್ಧ ಸುಳ್ಳು ಕೇಸ್‌ಗಳನ್ನು ಹಾಕಿ ಸರಕಾರವನ್ನು ಬೀಳಿಸುವ ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ಈ ಕಾರ್ಯತಂತ್ರಗಳು ಯಾವುದೆ ಕಾರಣಕ್ಕೂ ಸಫಲವಾಗುವುದಿಲ್ಲ. ಬಿಜೆಪಿ ನಾಯಕರು ವಿಫಲ ಪ್ರಯತ್ನ ಮಾಡುತ್ತಿದ್ದಾರೆಂದು ಕಿಡಿಕಾರಿದರು.

ಕೇಂದ್ರ ಸರಕಾರ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಸೇರಿದಂತೆ ದೇಶಾದ್ಯಂತ ಪ್ರಾದೇಶಿಕ ಪಕ್ಷಗಳು ಹಾಗೂ ಪ್ರತಿಪಕ್ಷದ ಮುಖಂಡರ ಮೇಲೆ ಸಿಬಿಐ, ಐಟಿ ಹಾಗೂ ಇಡಿ ಇಲಾಖೆಗಳ ಮೂಲಕ ಬೆದರಿಸುವ ತಂತ್ರ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದರೂ ಬೆಂಗಳೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಿಂತಿರುಗಿರುವುದನ್ನು ನೋಡಿದರೆ, ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಕೆಡವಿ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಬಂದಿರಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಬಂದ್‌ಗೆ ಜೆಡಿಎಸ್ ಬೆಂಬಲ

ಪೆಟ್ರೋಲ್, ಡಿಸೇಲ್ ದರ ಹೆಚ್ಚಳ ಸೇರಿದಂತೆ ಕೇಂದ್ರ ಸರಕಾರದ ವಿವಿಧ ನೀತಿಗಳ ವಿರುದ್ಧ ಸೆ.10ರಂದು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಜೆಡಿಎಸ್ ಬೆಂಬಲ ನೀಡಲಿದೆ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News