ಬಸ್ ಪ್ರಯಾಣ ದರ ಶೇ.18ರಷ್ಟು ಹೆಚ್ಚಳ ಅನಿವಾರ್ಯ: ಸಾರಿಗೆ ಸಚಿವ ತಮ್ಮಣ್ಣ ಸ್ಪಷ್ಟನೆ

Update: 2018-09-09 17:27 GMT

ಮಂಡ್ಯ, ಸೆ.9: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಯಲ್ಲಿ ಸಾರಿಗೆ ಬಸ್ ಪ್ರಯಾಣ ದರವನ್ನು ಶೇ.18ರಷ್ಟು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಮದ್ದೂರು ತಾಲೂಕಿನ ಸೋಮನಹಳ್ಳಿ ಜಿಪಂ ವ್ಯಾಪ್ತಿಯ ಮಾದನಾಯಕನಹಳ್ಳಿ ಗ್ರಾಮದಲ್ಲಿ ರವಿವಾರ ಸಿದ್ಧರಾಮೇಶ್ವರಸ್ವಾಮಿಯ ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ಕೇಂದ್ರದ ಬಿಜೆಪಿ ಸರಕಾರ ಪ್ರತಿನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಳ ಮಾಡುತ್ತಿರುವುದರಿಂದ ಅನಿವಾರ್ಯವಾಗಿ ಬಸ್ ಪ್ರಯಾಣದರ ಹೆಚ್ಚಳ ಮಾಡಲು ಇಲಾಖೆ ಮುಂದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈಗಾಗಲೇ ಈ ವಿಚಾರವಾಗಿ ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ದೀರ್ಘವಾದ ಚರ್ಚೆ ನಡೆಸಲಾಗಿದೆ. ಪ್ರಸ್ತಾಪಿತ ಶೇ.18ರಷ್ಟು ಬಸ್ ಪ್ರಯಾಣದರ ಹೆಚ್ಚಳ ವಾರದೊಳಗೆ ಜಾರಿಯಾಗಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇಂಧನ ದರ ಹೆಚ್ಚಳ ಒಳಗೊಂಡಂತೆ ಕೇಂದ್ರ ಸರಕಾರದ ಜನವಿರೋಧಿ ನೀತಿ ಖಂಡಿಸಿ ಸೆ.10ರಂದು ಕರೆ ನೀಡಿರುವ ಭಾರತ್ ಬಂದ್‍ಗೆ ಬೆಂಬಲ ನೀಡುವುದಾಗಿಯೂ ಅವರು ತಿಳಿಸಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಇದರಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆ ಕುಸಿಯುತ್ತಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ನೇರ ಹೊಣೆಯಾಗಿದ್ದಾರೆ ಎಂದು ಅವರು ಆರೋಪಿಸಿದರು.

ಕೂಡಲೇ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ತೈಲ ಬೆಲೆಯನ್ನು ಇಳಿಕೆ ಮಾಡಿ ಜನರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದೂ ಅವರು ಒತ್ತಾಯಿಸಿದರು.

ಜಿಪಂ ಸದಸ್ಯ ಬೋರಯ್ಯ, ಮಾದನಾಯಕನಹಳ್ಳಿ ರಾಜಣ್ಣ, ಬ್ಯಾಡರಹಳ್ಳಿ ಶಿವಕುಮಾರ್, ಗಿರೀಶ್, ಎಂ. ಮಹೇಶ್, ಮಲ್ಲಯ್ಯ, ರಾಜೇಂದ್ರಕುಮಾರ್, ಇತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News