ಅತಿವೃಷ್ಟಿ ಹಾನಿ: 2 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್‌ಗೆ ಕುಮಾರಸ್ವಾಮಿ ಮನವಿ

Update: 2018-09-10 12:50 GMT

ಹೊಸದಿಲ್ಲಿ/ ಬೆಂಗಳೂರು, ಸೆ. 10: ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವ ಬಗ್ಗೆ ಪ್ರಧಾನಿ ಮೋದಿ, ತಮ್ಮನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಸೋಮವಾರ ದಿಲ್ಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗವು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ಮನವರಿಕೆ ಮಾಡಿ, ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2 ಸಾವಿರ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿ, ಅನುದಾನ ಬಿಡುಗಡೆ ಮಾಡುವಂತೆ ಮಾಡಿದ ಮನವಿಗೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಲಾಗಿದೆ.

ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸತತ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಜನ- ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಆಗಸ್ಟ್ 2ನೆ ವಾರದಲ್ಲಿ 118 ವರ್ಷಗಳಲ್ಲೇ ದಾಖಲೆ ಮಳೆ ಸುರಿದಿದ್ದರಿಂದ ಅಪಾರ ನಷ್ಟ ಸಂಭವಿಸಿದ್ದು, ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳಿಗೆ, ಮೂಲ ಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ.

ಅತಿವೃಷ್ಟಿಯಿಂದಾಗಿ ಈ ಜಿಲ್ಲೆಗಳಲ್ಲಿ ಒಟ್ಟು 3705.87 ಕೋಟಿ ರೂ.ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2 ಸಾವಿರ ರೂ. ಪ್ಯಾಕೇಜ್ ಘೋಷಿಸಿ, ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ನಿಯೋಗದ ಇತರ ಸದಸ್ಯರೊಂದಿಗೆ ಪ್ರಧಾನಿಗೆ ಮನವಿ ಸಲ್ಲಿಸಿದರು.

ಅಂತೆಯೇ ಕರ್ನಾಟಕದ ಒಳನಾಡಿನಲ್ಲಿ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಈ ಕುರಿತು ನಷ್ಟದ ಪ್ರಮಾಣ ಅಂದಾಜು ಮಾಡಲಾಗುತ್ತಿದ್ದು, ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿ ಪ್ರಸ್ತಾವನೆಯನ್ನು ಅಂತಿಮಗೊಳಿಸಲಿದೆ. ಅದರಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಎಂದು ನಿಯೋಗವು ಪ್ರಧಾನಿಯವರಿಗೆ ಮಾಹಿತಿ ನೀಡಿತು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸಿಎಂ ನೇತೃತ್ವದ ನಿಯೋಗದಲ್ಲಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News