ಬಿಜೆಪಿಯ 10 ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

Update: 2018-09-11 14:46 GMT

ಕಲಬುರ್ಗಿ, ಸೆ.11: ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಸಮ್ಮಿಶ್ರ ಸರಕಾರದ ತಂಟೆಗೆ ಬಂದರೆ ಪ್ರತೀಕಾರ ತೀರಿಸಬೇಕಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಎಚ್ಚರಿಕೆ ನೀಡಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಿಂಬಾಗಿಲ ಮೂಲಕ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾದರೆ, ನಾವು ಸಂವಿಧಾನದಡಿಯಲ್ಲಿಯೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದೇವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಮುಖ್ಯಮಂತ್ರಿ ಆಗಬೇಕೆಂಬ ಹಗಲು ಗನಸು ಬಿಟ್ಟಿಲ್ಲವೆಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್, ರಾಜ್ಯ ರಾಜಕಾರಣದಲ್ಲಿ ಮೂಗು ತೂರಿಸುತ್ತಿದ್ದಾರೆಂದರೆ, ರಾಜ್ಯದ ಬಿಜೆಪಿ ನಾಯಕರು ಅಸಮರ್ಥರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಅವರು ಕಿಡಿಕಾರಿದರು.

ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ. ಅವರೆಂದಿಗೂ ಕಾಂಗ್ರೆಸ್ ತೊರೆಯುವುದಿಲ್ಲ. ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ ವಿಷಯವನ್ನು ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಗೆಹರಿಸಿದ್ದಾರೆ. ಈ ವಿಷಯದಲ್ಲಿ ಯಾವುದೆ ಗೊಂದಲವಿಲ್ಲವೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News