ಪಟಾಕಿ ಬಳಕೆ ನಿಷೇಧಕ್ಕೆ ಆಗ್ರಹಿಸಿ ಸಾಂಕೇತಿಕ ಧರಣಿ

Update: 2018-09-12 14:16 GMT

ಬೆಂಗಳೂರು, ಸೆ.12: ಸಾಂಸ್ಕೃತಿಕ, ಧಾರ್ಮಿಕ, ರಾಷ್ಟ್ರೀಯ ಹಬ್ಬಗಳು ಹಾಗೂ ಚುನಾವಣೆ ಸಂದರ್ಭಗಳಲ್ಲಿ ಪಟಾಕಿ ಬಳಕೆ ನಿಷೇಧಿಸಬೇಕು ಎಂದು ಆಗ್ರಹಿಸಿ ಪರಿಸರ ಮತ್ತು ಸಾಮಾಜಿಕ ಹೋರಾಟಗಾರ್ತಿ ಗೀತಾ ಸಂತೋಷ್ ಕುಮಾರ್ ನಗರದ ಪ್ರೆಸ್ ಕ್ಲಬ್ ಎದುರು ಸಾಂಕೇತಿಕ ಧರಣಿ ನಡೆಸಿದರು.

ಪ್ರತಿಭಟನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಕಿನಿಂದ ಕತ್ತಲೆಗೆ ಒಯ್ಯುವ ಪಟಾಕಿ ಬಳಕೆಯನ್ನು ನಿಷೇಧಿಸಬೇಕು. ಹಲವು ಸಮಸ್ಯೆಗಳನ್ನು ಹುಟ್ಟುಹಾಕುತ್ತಿರುವ ಪಟಾಕಿ ಬಳಕೆಯಿಂದ ಬದುಕು ಕತ್ತಲಾಗಲಿದೆ. ಹೀಗಾಗಿ, ಪಟಾಕಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅನ್ವಯ 125 ಡೆಸಿಬಲ್ ಶಬ್ದ ಉಂಟು ಮಾಡುವ ಪಟಾಕಿಗಳ ಬಳಕೆಗೆ ಅನುಮತಿ ಇದೆ. ಆದರೆ, ಇಂದು 175 ಡೆಸಿಬಲ್ ವರೆಗೂ ಶಬ್ದ ಮಾಲಿನ್ಯ ಉಂಟುಮಾಡುತ್ತಿರುವ ಪಟಾಕಿಗಳನ್ನು ಬಳಸಲಾಗುತ್ತಿದೆ. ಇದರಿಂದ ಶ್ರವಣ ದೋಷ ಉಂಟಾಗಲಿದೆ ಎಂದರು.

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮತ್ತು ಧಾರ್ಮಿಕ ಪ್ರದೇಶ, ಶಾಲಾ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ್ದರೂ, ಅದನ್ನು ಉಲ್ಲಂಘಿಸಲಾಗುತ್ತಿದೆ. ಪಟಾಕಿಯಿಂದ ಉಂಟಾಗುವ ವಾಯು ಮಾಲಿನ್ಯದಿಂದ ಮನುಷ್ಯರಲ್ಲಿ ಬಹು ಅಂಗಾಂಗಗಳ ವೈಫಲ್ಯಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದರು.

ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಸಾವಿರಾರು ಜನರು ತಮ್ಮ ಪ್ರಾಣದ ಹಂಗನ್ನು ತೊರೆದು ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಈ ಕಾರ್ಖಾನೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಇರುವುದರಿಂದ ಸಂಭವಿಸುತ್ತಿರುವ ದುರಂತಗಳಲ್ಲಿ ವರ್ಷಕ್ಕೆ 250 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೆ, ಪಟಾಕಿಗಳ ಬಳಕೆ ಸಂದರ್ಭದಲ್ಲಿ ನೂರಾರು ಜನರು ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ, ಉಪಯೋಗವಿಲ್ಲದ ಪಟಾಕಿ ಬಳಕೆ ನಿಷೇಧ ಮಾಡಬೇಕು ಎಂದು ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News